ಮನೆ ಸ್ಥಳೀಯ ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ: ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ- ಅಪರ...

ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಆರಂಭ: ಯಾವುದೇ ಲೋಪವಾಗದಂತೆ ನೋಡಿಕೊಳ್ಳಿ- ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು

0

ಮೈಸೂರು: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ ಮಾರ್ಚ್ 22ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ 49 ಕೇಂದ್ರಗಳಲ್ಲಿ ಜರುಗಲಿದ್ದು ಯಾವುದೇ ಲೋಪದೋಷಗಳವಾಗದಂತೆ ಪರೀಕ್ಷೆ ನಡೆಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಶಿವರಾಜು ಅವರು ತಿಳಿಸಿದರು.

ಅವರು ಇಂದು ಜಿಲ್ಲಾಧಿಕಾರಿಕಗಳ ಕಛೇರಿಯಲ್ಲಿ ನಡೆದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ಸುಗಮ ಸಂಚಾಲನೆಗಾಗಿ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದರು.

ಮೈಸೂರು ನಗರದಲ್ಲಿ 26 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಗ್ರಾಮಾಂತರ ವ್ಯಾಪ್ತಿಯಲ್ಲಿ 23 ಪರೀಕ್ಷಾ ಕೇಂದ್ರಗಳಲ್ಲಿ 31,628 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು
ಎಲ್ಲಾ ಪರೀಕ್ಷಾ ಕೇಂದ್ರಗಳ ಮೇಲೆ ತೀವ್ರ ನಿಗಾ ವಹಿಸಬೇಕು ಎಂದರು.

ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಸೂಕ್ತ ಆಸನ ಹಾಗೂ ಪರೀಕ್ಷೆ ಬರೆಯಲು ಡೆಸ್ಕ್ ವ್ಯವಸ್ಥೆ ಮಾಡಬೇಕು. ಕುಡಿಯುವ ನೀರು, ಶೌಚಾಲಯದ ಸೇರಿದಂತೆ ಮೂಲಭೂತ ಸೌಕರ್ಯದ ವ್ಯವಸ್ಥೆಯಾಗಬೇಕು ಎಂದರು.

ಕೊಠಡಿಗಳಲ್ಲಿ ಗಡಿಯಾರ, ಸಿ.ಸಿ.ಟಿ.ವಿ ವ್ಯವಸ್ಥೆ ಕಡ್ಡಾಯವಾಗಿ ಇರಬೇಕು. ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತಾಗಬೇಕು ಎಂದರು.

ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀ. ಸುತ್ತಳತೆಯಲ್ಲಿ 144 ನೇ ಕಲಂ ಜಾರಿಗೊಳಿಸಲು ಮತ್ತು ಪರೀಕ್ಷಾ ಕೇಂದ್ರಗಳ ಸುತ್ತ ಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಿಸಬೇಕು ಎಂದರು.

ಪರೀಕ್ಷಾ ಕೇಂದ್ರಕ್ಕೆ ಮುಖ್ಯ ಅಧೀಕ್ಷಕರುಗಳನ್ನು ನೇಮಕ ಮಾಡಲಾಗಿದೆ. ಮುಖ್ಯ ಅಧೀಕ್ಷಕರನ್ನು ಹೊರತುಪಡಿಸಿ ಕೊಠಡಿ ಮೇಲ್ವಿಚಾರಕರು, ಇತರೆ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಮೊಬೈಲ್ ಇತ್ಯಾದಿ ಎಲೆಕ್ಟ್ರಾನಿಕ್ ಸಾಧನಗಳನ್ನು ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಬೇಕು ಎಂದರು.

ಜಿಲ್ಲಾ ಖಜಾನೆಯಿಂದ ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ವಿತರಿಸಲು ಪ್ರಶ್ನೆ ಪತ್ರಿಕೆ ಮಾರ್ಗಾಧಿಕಾರಿ ತಂಡಗಳಿಗೆ ಅಗತ್ಯವಿರುವ ವಾಹನಗಳ ಸೌಕರ್ಯ ಒದಗಿಸಿ ಎಂದರು

ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿಯನ್ನು online ನಲ್ಲಿ upload (PU exam login portal) ಮಾಡುವುದರಿಂದ ಪರೀಕ್ಷಾ ಸಮಯದಲ್ಲಿ ನಿರಂತರ ವಿದ್ಯುತ್ ಸರಬರಾಜು ಮಾಡಬೇಕು ಎಂದರು.

ಪರೀಕ್ಷಾ ದಿನಗಳಂದು ಪ್ರಶ್ನೆ ಪತ್ರಿಕೆ ವಿತರಕರ ತಂಡದ ಬೆಂಗಾವಲಾಗಿ ಸಶಸ್ತ್ರ ಪೊಲೀಸ್ ಸಿಬ್ಬಂದಿಯನ್ನು ನೇಮಿಸಲಾಗುವುದು ಎಂದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ.ಮರಿಸ್ವಾಮಿ ಹಾಗೂ ಕಾಲೇಜಿನ ಪ್ರಾಂಶುಪಾಲರು ಉಪಸ್ಥಿತರಿದ್ದರು.