ಬೆಂಗಳೂರು: ಮೊದಲ ಹಂತದ ಲೋಕಸಭಾ ಚುನಾವಣೆ ನಡೆಯಲಿರುವ ರಾಜ್ಯದಲ್ಲಿರುವ 14 ಕ್ಷೇತ್ರಗಳಿಗೆ ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್. ಡಿ.ಕುಮಾರಸ್ವಾಮಿ, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಸಿ. ಎನ್, ಮಂಜುನಾಥ್ ಸೇರಿದಂತೆ ಹಲವು ನಾಯಕರು ನಾಮಪತ್ರ ಸಲ್ಲಿಸಿದ್ದಾರೆ.
ಮಂಡ್ಯದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಹೆಚ್. ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸಿದರು. ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ, ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್, ಯದುವೀರ್ ಒಡೆಯರ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇದಕ್ಕೂ ಮುನ್ನ, ನಗರದ ಕಾವೇರಿ ಭವನದ ಮುಂಭಾಗದಲ್ಲಿರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ, ಜಯಚಾಮರಾಜೇಂದ್ರ ಒಡೆಯರ್ ಹಾಗೂ ಸರ್.ಎಂ.ವಿಶ್ವೇಶ್ವರಯ್ಯ ಅವರುಗಳ ಪುತ್ಥಳಿ ಗೌರವ ಸಲ್ಲಿಸಿದರು.