ಅಗರ್ತಲಾ (Agartala)- ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಾಹಾ ಪ್ರಮಾಣ ವಚನ ಸ್ವೀಕರಿಸಿದರು.
ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್.ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು.
ಮಾಜಿ ಮುಖ್ಯಮಂತ್ರಿ ಬಿಪ್ಬಲ್ ಕುಮಾರ್ ದೇಬ್ ಶನಿವಾರ ಸಂಜೆ ದಿಢೀರನ್ನೇ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಹಿನ್ನೆಲೆಯಲ್ಲಿ ಮಾಣಿಕ್ ಸಾಹಾ ಅವರನ್ನು ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ್ನಾಗಿ ನೇಮಕ ಮಾಡಲಾಗಿತ್ತು. ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಸಚಿವರು, ಬಿಜೆಪಿಯ ಶಾಸಕರು ಉಪಸ್ಥಿತರಿದ್ದರು.
ಕೇಂದ್ರ ಸಚಿವೆ ಪ್ರತಿಮಾ ಭೌಮಿಕ್ ಕೂಡ ಪ್ರಮಾಣ ವಚನ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಾಹಾ ಅವರನ್ನು ಮುಖ್ಯಮಂತ್ರಿಯಾಗಿ ನೇಮಕ ಮಾಡಿರುವುದನ್ನು ವಿರೋಧಿಸಿದ್ದ ಉಪಮುಖ್ಯಮಂತ್ರಿ ಜಿಷ್ಣು ದೇವ್ ವರ್ಮಾ ಮತ್ತು ಸಚಿವ ರಾಮ್ ಪ್ರಸಾದ್ ಪಾಲ್, ಪ್ರಮಾಣ ವಚನ ಸಮಾರಂಭ ಮುಗಿದ ಕೆಲವೇ ಕ್ಷಣಗಳಲ್ಲಿ ರಾಜಭವನಕ್ಕೆ ಆಗಮಿಸಿದರು.
ಬಿಜೆಪಿ ಆಡಳಿತದ ತ್ರಿಪುರಾ ರಾಜ್ಯದಲ್ಲಿ ಫ್ಯಾಸಿಸ್ಟ್ ಶೈಲಿಯ ಹಿಂಸಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಪ್ರತಿಪಕ್ಷ ಸಿಪಿಐ(ಎಂ) ಶಾಸಕರು ಪ್ರಮಾಣ ವಚನ ಸಮಾರಂಭವನ್ನು ಬಹಿಷ್ಕರಿಸಿದರು.