ಮನೆ ರಾಜ್ಯ ವಿ.ಶ್ರೀನಿವಾಸ ಪ್ರಸಾದ್​ ನಿಧನಕ್ಕೆ ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಸಂತಾಪ

ವಿ.ಶ್ರೀನಿವಾಸ ಪ್ರಸಾದ್​ ನಿಧನಕ್ಕೆ ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರ ಸಂತಾಪ

0

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರದ ಬಿಜೆಪಿ ಸಂಸದ ಶ್ರೀನಿವಾಸ ಪ್ರಸಾದ್​ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

Join Our Whatsapp Group

ಹಿರಿಯ ನಾಯಕ ಹಾಗೂ ಚಾಮರಾಜನಗರದ ಸಂಸದರಾದ ವಿ.ಶ್ರೀನಿವಾಸ ಪ್ರಸಾದ್ ಅವರ ನಿಧನದಿಂದ ನನಗೆ ಅತೀವ ನೋವಾಗಿದೆ. ಅವರು ಸಾಮಾಜಿಕ ನ್ಯಾಯದ ಹೋರಾಟಗಾರರಾಗಿದ್ದರು, ಬಡವರು, ದೀನದಲಿತರು ಮತ್ತು ಅಂಚಿನಲ್ಲಿರುವವರ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು. ಅವರು ತಮ್ಮ ವಿವಿಧ ಸಮಾಜ ಸೇವೆಗಾಗಿ ಬಹಳ ಜನಪ್ರಿಯರಾಗಿದ್ದರು. ಓಂ ಶಾಂತಿ ಎಂದು ಪ್ರಧಾನಿ ಮೋದಿ ಟ್ವೀಟ್​ ಮೂಲಕ ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಸಂತಾಪ

“ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸ ಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ.

ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.

ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಎಂದು ಮುಖ್ಯಮಂತ್ರಿ ಸಿದ್ದರಾಮಯ್ ಸಂತಾಪ ಸೂಚಿಸಿದ್ದಾರೆ.

ಕಂಬನಿ ಮಿಡಿದ ಯಡಿಯೂರಪ್ಪ

ಹಿರಿಯ ನಾಯಕರು, ಚಾಮರಾಜನಗರ ಕ್ಷೇತ್ರದ ಸಂಸದರು, ಆತ್ಮೀಯರಾದ ಶ್ರೀ ವಿ.ಶ್ರೀನಿವಾಸ್ ಪ್ರಸಾದ್ ವಿಧಿವಶರಾದ ಸುದ್ದಿ ದಿಗ್ಭ್ರಮೆ ಮೂಡಿಸಿದೆ. ಕೆಲ ದಿನಗಳ ಹಿಂದೆಯಷ್ಟೇ ಅವರನ್ನು ಭೇಟಿಯಾಗಿದ್ದು, ಈಗ ಅವರು ನಮ್ಮೊಂದಿಗೆ ಇಲ್ಲ ಎನ್ನುವುದನ್ನು ನಂಬಲಾಗುತ್ತಿಲ್ಲ. ರಾಜ್ಯ ಹಾಗೂ ದೇಶದ‌ ರಾಜಕೀಯದಲ್ಲಿ ತಮ್ಮದೇ ಛಾಪು ಮೂಡಿಸಿದ್ದ ಅವರು ಪ್ರಭಾವಿ ದಲಿತ ಮುಖಂಡರಾಗಿ ಗುರುತಿಸಿಕೊಂಡಿದ್ದರು. ಅವರ ನಿಧನದಿಂದ ನಾಡು ಒಬ್ಬ ಹಿರಿಯ ನೇತಾರರನ್ನು ಕಳೆದುಕೊಂಡಿದೆ. ಅವರ ಆತ್ಮಕ್ಕೆ ಸದ್ಗತಿ ಪ್ರಾರ್ಥಿಸುತ್ತಾ, ಅವರ ಕುಟುಂಬ, ಅಭಿಮಾನಿಗಳಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ಕಂಬನಿ ಮಿಡಿದಿದ್ದಾರೆ.

ಡಿ ಕೆ ಶಿವಕುಮಾರ್​ ಸಂತಾಪ

“ಹಿರಿಯ ನಾಯಕರು, ಸಂಸದರಾದ ಶ್ರೀ ಶ್ರೀನಿವಾಸ್ ಪ್ರಸಾದ್ ಅವರು ನಿಧನರಾದ ಸಂಗತಿ ತಿಳಿದು ಮನಸ್ಸಿಗೆ ಅಪಾರ ನೋವಾಯಿತು. ಆಪ್ತರೂ ಆಗಿದ್ದ ಪ್ರಸಾದ್ ಅವರೊಂದಿಗೆ ಕೆಲಸ ಮಾಡಿದ ದಿನಗಳು ಇನ್ನೂ ನೆನಪಿನಲ್ಲಿವೆ. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರು, ಅಭಿಮಾನಿಗಳಿಗೆ ಅಗಲಿಕೆಯ ನೋವು ಸಹಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ‌ ಶಾಂತಿ” ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​ ಟ್ವೀಟ್​ ಮಾಡಿದ್ದಾರೆ.

ಬಸವರಾಜ ಬೊಮ್ಮಾಯಿ ಸಂತಾಪ

ಕೇಂದ್ರದ ಮಾಜಿ ಸಚಿವರು, ಚಾಮರಾಜನಗರ ಲೋಕಸಭಾ ಕ್ಷೇತ್ರದ ನಮ್ಮ ಪಕ್ಷದ ಸಂಸದರಾದ ಹಿರಿಯ ರಾಜಕಾರಣಿ ವಿ. ಶ್ರೀನಿವಾಸ ಪ್ರಸಾದ್ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ದುಃಖವಾಗಿದೆ. ಶಾಸಕರಾಗಿ, ಸಂಸದರಾಗಿ ಸುಮಾರು ಐವತ್ತು ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ತೊಡಗಿಸಿಕೊಂಡು ಸಾಕಷ್ಟು ಜನಪರ ಕಾರ್ಯಗಳನ್ನು ಮಾಡುವ ಮೂಲಕ ಜನಾನುರಾಗಿಯಾಗಿದ್ದರು.

ಶ್ರೀನಿವಾಸ ಪ್ರಸಾದ ಅವರ ಅಗಲಿಕೆಯಿಂದ ರಾಜ್ಯ ಒಬ್ಬ ಹಿರಿಯ ನಾಯಕ ಹಾಗೂ ಮಾರ್ಗದರ್ಶಕನನ್ನು ಕಳೆದುಕೊಂಡಂತಾಗಿದೆ. ಅವರ ಕುಟುಂಬ ವರ್ಗ ಹಾಗೂ ಅವರ ಅಭಿಮಾನಿಗಳಿಗೆ ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ, ಅವರ ಆತ್ಮಕ್ಕೆ ಚಿರಶಾಂತಿ ನೀಡಲೆಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿಃ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ದುಃಖತಪ್ತರಾದರು.