ಬೆಂಗಳೂರು: ಅಶ್ಲೀಲ ವಿಡಿಯೋ, ಲೈಂಗಿಕ ದೌರ್ಜನ್ಯ ಆರೋಪ ಹೊತ್ತಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ತೆರಳಿದ್ದಾರೆ. ಇತ್ತ ವಿಚಾರಣೆಗೆ ಹಾಜರಾಗುವಂತೆ ಎಸ್ಐಟಿ ಈಗಾಗಲೆ ನೋಟಿಸ್ ನೀಡಿದ್ದರೂ ಕೂಡ ಪ್ರಜ್ವಲ್ ರೇವಣ್ಣ ಮಾತ್ರ ಹಾಜರಾಗುತ್ತಿಲ್ಲ.
ವಿದೇಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರ ಖಾತೆಗೆ ಬೆಂಗಳೂರಿನಿಂದ ಲಕ್ಷಾಂತರ ಹಣ ವರ್ಗಾವಣೆಯಾಗಿದೆ ಎಂದು ಮಾಹಿತಿ ಎಸ್ಐಟಿ ಅಧಿಕಾರಿಗಳಿಗೆ ದೊರೆತಿದೆ.
ಹೀಗಾಗಿ ಹಣ ವರ್ಗಾವಣೆಯಾಗದಂತೆ ತಡೆಯಲು ಎಸ್ಐಟಿ ಅಧಿಕಾರಿಗಳು ನ್ಯಾಯಾಲಯದ ಅನುಮತಿ ಪಡೆದು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಯನ್ನು ಫ್ರೀಜ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ಅಧಿಕಾರಿಗಳು ಪ್ರಜ್ವಲ್ ರೇವಣ್ಣ ಅವರ ಬ್ಯಾಂಕ್ ಖಾತೆಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ.
ಪ್ರಜ್ವಲ್ ರೇವಣ್ಣ ಈಗಾಗಲೇ 2 ಬಾರಿ ಟಿಕೆಟ್ ಕ್ಯಾನ್ಸಲ್ ಮಾಡಿದ್ದಾರೆ. ಮೇ 03 ಮತ್ತು 15 ರಂದು ಭಾರತಕ್ಕೆ ಬರಲು ವಿಮಾನದ ಟಿಕೆಟ್ ಬುಕ್ ಮಾಡಿ ಕ್ಯಾನ್ಸಲ್ ಮಾಡಿದ್ದಾರೆ. ಹೀಗಾಗಿ ಅಧಿಕಾರಿಗಳು ಮುಂದಿನ ಟಿಕೆಟ್ ಬುಕ್ಕಿಂಗ್ ಮೇಲೆ ಹದ್ದಿನ ಕಣ್ಣಿಟ್ಟು ಕಾಯುತ್ತಿದ್ದಾರೆ.