ಬೆಂಗಳೂರು: ಜೂನ್ 29ರ ರಾತ್ರಿ 8 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಭೇಟಿಗೆ ಸಮಯ ನಿಗದಿಯಾಗಿದೆ. ಪ್ರಧಾನಿ ಹಾಗೂ ಕೇಂದ್ರದ ಹಲವು ಸಚಿವರ ಜತೆ ಮಾತುಕತೆ ನಡೆಸಲಿದ್ದೇನೆ. ಇದಕ್ಕಾಗಿ ಇಂದೇ ದೆಹಲಿಗೆ ತೆರಳಲಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ತಿಳಿಸಿದರು.
ದೆಹಲಿಗೆ ತೆರಳುವ ಮುನ್ನ ಇಂದು ರಾಜ್ಯದ ಸಂಸದರ ಜೊತೆ ಸಭೆ ನಡೆಸುತ್ತೇನೆ. ರಾಜ್ಯಕ್ಕೆ ಬರಬೇಕಿರುವ ಅನುದಾನ, ಯೋಜನೆಗಳ ಬಗ್ಗೆ ಚರ್ಚೆ ನಡೆಸಿ ಮಾಹಿತಿ ಸಂಗ್ರಹಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಜಂಟಿಯಾಗಿ ಅನುಷ್ಠಾನಗೊಳಿಸಬೇಕಿರುವ ಯೋಜನೆಗಳ ಬಗ್ಗೆ ಪ್ರಧಾನ ಮಂತ್ರಿ ಹಾಗೂ ಕೇಂದ್ರ ಸಚಿವರ ಜತೆ ಚರ್ಚಿಸಲಿದ್ದೇನೆ. ರಾಜ್ಯದ ಯೋಜನೆಗಳಿಗೆ ಕೇಂದ್ರದಿಂದ ಬರಬೇಕಿರುವ ಅನುದಾನದ ಬಗ್ಗೆಯೂ ಪ್ರಸ್ತಾಪಿಸಲಿದ್ದೇನೆ. ಇದಕ್ಕಾಗಿ ಸಂಸದರ, ರಾಜ್ಯಸಭಾ ಸದಸ್ಯರ ಜತೆ ಸಭೆ ನಡೆಸಿ ಮಾಹಿತಿ ಕಲೆ ಹಾಕಲಿದ್ದೇನೆ ಎಂದು ಸಿದ್ದರಾಮಯ್ಯ ತಿಳಿಸಿದರು.