ಮನೆ ಕಾನೂನು ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ಬಿಜೆಪಿ ಶಾಸಕ ಪೂಂಜಾ ವಿರುದ್ಧ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪ್ರಕರಣ: ಬಿಜೆಪಿ ಶಾಸಕ ಪೂಂಜಾ ವಿರುದ್ಧ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಕಾರ

0

ಪರವಾನಗಿ ಪಡೆಯದೇ ಗಣಿಗಾರಿಕೆ ನಡೆಸಲಾಗುತ್ತಿದೆ ಎಂಬ ಆರೋಪದಡಿ ವ್ಯಕ್ತಿಯೊಬ್ಬರನ್ನು ಬಂಧಿಸಿದ್ದ ಪೊಲೀಸರ ಕ್ರಮವನ್ನು ಆಕ್ಷೇಪಿಸಿ ಠಾಣೆಗೆ ಧಾವಿಸಿ ಪೊಲೀಸರನ್ನು ನಿಂದಿಸಿ, ಬೆದರಿಕೆ ಹಾಕಿದ ಹಾಗೂ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧದ ಪ್ರಕರಣ ರದ್ದುಪಡಿಸಲು ಹೈಕೋರ್ಟ್‌ ನಿರಾಕರಿಸಿದೆ.

Join Our Whatsapp Group

ಹರೀಶ್‌ ಪೂಂಜಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರ ಏಕಸದಸ್ಯ ಪೀಠವು ಈ ಸಂಬಂಧ ವಿಚಾರಣಾಧೀನ ನ್ಯಾಯಾಲಯದಲ್ಲೇ ಅರ್ಜಿ ಸಲ್ಲಿಸಿ ಸೂಕ್ತ ಪರಿಹಾರ ಕಂಡುಕೊಳ್ಳಬಹುದು ಎಂದು ಸೂಚಿಸಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಪೂಂಜಾ ವಿರುದ್ಧ ಪೊಲೀಸರು ಈಗಾಗಲೇ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದಾರೆ. ಹೀಗಾಗಿ, ಆರೋಪಗಳನ್ನು ಕೈ ಬಿಡುವಂತೆ ಕೋರಿ ಅರ್ಜಿದಾರರು ವಿಚಾರಣಾಧೀನ ನ್ಯಾಯಾಲಯದಲ್ಲೇ ಅರ್ಜಿದಾರರು ಅರ್ಜಿ ಸಲ್ಲಿಸಬೇಕು. ನ್ಯಾಯಾಲಯ ಎಂಟು ವಾರಗಳಲ್ಲಿ ಆ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿ ತೀರ್ಮಾನ ಕೈಗೊಳ್ಳಬೇಕು. ಅಲ್ಲಿಯವರೆಗೆ ವಿಚಾರಣೆಗೆ ಹಾಜರಾಗುವಂತೆ ಅರ್ಜಿದಾರರಿಗೆ ನ್ಯಾಯಾಲಯ ಸೂಚಿಸಬಾರದು ಎಂದು ಅರ್ಜಿ ಇತ್ಯರ್ಥಪಡಿಸಿತು.

ಪ್ರಕರಣದ ಹಿನ್ನೆಲೆ: ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದ್ದ ಆರೋಪದಡಿ ಶಶಿರಾಜ್ ಶೆಟ್ಟಿ ಎಂಬುವರನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದರು. ಈ ಹಿನ್ನೆಲೆಯಲ್ಲಿ ಠಾಣೆಗೆ ಭೇಟಿ ನೀಡಿದ್ದರು. ಹರೀಶ್‌ ಪೂಂಜಾ, ಪೊಲೀಸ್ ಅಧಿಕಾರಿಗಳನ್ನು ನಿಂದಿಸಿ, ಬೆದರಿಕೆ ಒಡ್ಡಿದ್ದಾರೆ. ಸರ್ಕಾರಿ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದ್ದಾರೆ ಎಂದು ಆರೋಪಿಸಿ ಪೊಲೀಸರು ಎರಡು ಎಫ್‌ಐಆರ್‌ ದಾಖಲಿಸಿದ್ದರು.

ಇದನ್ನು ಪ್ರಶ್ನಿಸಿ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ಹಂತದಲ್ಲಿರುವಾಗಲೇ ಪೊಲೀಸರು ಹರೀಶ್‌ ಪೂಂಜಾ ಹಾಗೂ ಇತರ ಆರೋಪಿಗಳ ವಿರುದ್ಧ ವಿಚಾರಣಾಧೀನ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.