ಬೆಂಗಳೂರು: ಕರ್ನಾಟಕದ ಹಲವೆಡೆ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯು ಜನರ ಬದುಕನ್ನೇ ಬೀದಿಗೆ ತರುತ್ತಿದೆ. ಎಡಬಿಡದೇ ಸುರಿಯುತ್ತಿರುವ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಮನೆ-ಮಠ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಇದೀಗ ಕರ್ನಾಟಕ ಸರ್ಕಾರ, ಮಳೆ ಹಾನಿ ಪರಿಹಾರಕ್ಕೆ ಹಣ ಬಿಡುಗಡೆ ಮಾಡಿದೆ. ಇಂದು (ಜುಲೈ 19) ವಿಧಾನಸಭೆ ಅಧಿವೇಶನದಲ್ಲಿ ಮಳೆ ಹಾನಿ ಕುರಿತು ಚರ್ಚೆ ನಡೆದಿದ್ದು, ಈ ವೇಳೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ಮಾಹಿತಿ ನೀಡಿದರು.
ವಿಧಾನಸಭೆಯಲ್ಲಿ ನಿಯಮ 69 ಅಡಿಯಲ್ಲಿ ಉತ್ತರ ನೀಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಸಮಸ್ಯೆ ನಿವಾರಣೆಗೆ ರಾಜ್ಯ ಸರ್ಕಾರ ಎಲ್ಲಾ ಪ್ರಯತ್ನ ಮಾಡುತ್ತಿದೆ. ಸಂಪುಟ ಸಭೆಯಲ್ಲಿ ಹಾನಿ ಪರಿಹಾರ ಬಗ್ಗೆ ಚರ್ಚೆ ಮಾಡುತ್ತೇವೆ. ಕರಾವಳಿ ಭಾಗದಲ್ಲಿ ವಾಡಿಕೆಗಿಂತ ಶೇ.21ರಷ್ಟು ಹೆಚ್ಚು ಮಳೆ ಆಗಿದೆ. ಮಲೆನಾಡಿನಲ್ಲಿ ವಾಡಿಕೆಗಿಂತ ಶೇಕಡಾ 9ರಷ್ಟು ಹೆಚ್ಚು ಮಳೆಯಾಗಿದೆ. ಪರಿಹಾರ ಕ್ರಮಕ್ಕೆ ಎಲ್ಲಾ ಜಿಲ್ಲೆಗಳಿಗೆ 777.54 ಕೋಟಿ ರೂ. ನೀಡಲಾಗಿದ್ದು, ಮಳೆ ಹಾನಿ ಪರಿಹಾರ ಕ್ರಮಕ್ಕೆ ನಮ್ಮ ಬಳಿ ಹಣದ ಕೊರತೆ ಇಲ್ಲ ಎಂದು ತಿಳಿಸಿದರು.
6 ಜಿಲ್ಲೆಗಳಲ್ಲಿ 5 ಎನ್ಡಿಆರ್ಎಫ್ ತುಕಡಿ ನಿಯೋಜಿಸಲಾಗಿದೆ. ಸಮಸ್ಯೆ ಉಂಟಾಗುವ 2,225 ಗ್ರಾಮಗಳನ್ನು ಗುರುತಿಸಲಾಗಿದ್ದು, 1,200ಕ್ಕೂ ಹೆಚ್ಚು ಗ್ರಾಮ ಪಂಚಾಯಿತಿಗಳಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದೆ. ಅಲ್ಲದೇ ತಾಲೂಕು ಮಟ್ಟದ ಅಧಿಕಾರಿ ಪ್ರತಿ ಗ್ರಾಮ ಪಂಚಾಯಿತಿಗೆ ಪ್ರವಾಹ ನಿರ್ವಹಣೆಗೆ ನೋಡಲ್ ಅಧಿಕಾರಿಯಾಗಿ ನೇಮಕ ಮಾಡಿದ್ದು, ಗ್ರಾ.ಪಂ. ಟಾಸ್ಕ್ಫೋರ್ಸ್ಗೂ ಹಣ ಬಿಡುಗಡೆ ಮಾಡಲಾಗಿದೆ ಎಂದು ವಿವರಿಸಿದರು.