ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಗ್ರಾಮ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ-66ರ ಅಂಚಿನಲ್ಲಿ ಉಂಟಾದ ಗುಡ್ಡ ಕುಸಿತದ ಪ್ರಕರಣದಲ್ಲಿ ಮಣ್ಣಿನಡಿ ಸಿಲುಕಿರುವ ಅಥವಾ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎಂದು ಅಂದಾಜಿಸಲಾಗಿರುವ ವ್ಯಕ್ತಿಗಳ ರಕ್ಷಣೆ ಹಾಗೂ ತೆರವು ಕಾರ್ಯಚರಣೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸುವಂತೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಿಗೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಸೂಚಿಸಿದೆ.
ವಕೀಲ ಶಿಜಿ ಮಲಯಾಳಿ ಹಾಗೂ ನವದೆಹಲಿಯ ಕೆ ಆರ್ ಸುಭಾಷ್ ಚಂದ್ರನ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ವಿ ಕಾಮೇಶ್ವರ ರಾವ್ ಹಾಗೂ ಸಿ ಎಂ ಜೋಶಿ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಕೇಂದ್ರ ಸರ್ಕಾರದ ಪರ ಡೆಪ್ಯುಟಿ ಸಾಲಿಸಿಟರ್ ಜನರಲ್ ಎಚ್ ಶಾಂತಿಭೂಷಣ್ ಅವರು “ಕೇಂದ್ರವು ಎಲ್ಲ ರೀತಿಯ ಕಾರ್ಯಾಚರಣೆ ಕೈಗೊಂಡಿದೆ” ಎಂದು ಮಂಗಳವಾರ ಬೆಳಗಿನವರೆಗಿನ ಕಾರ್ಯಾಚರಣೆ ವರದಿಯನ್ನು ಪೀಠಕ್ಕೆ ಸಲ್ಲಿಸಿದರು.
ಇದನ್ನು ದಾಖಲಿಸಿಕೊಂಡ ನ್ಯಾಯಾಲಯವು “ಮುಂದುವರಿದ ಕಾರ್ಯಾಚರಣೆಗೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಸಲ್ಲಿಸಬೇಕು” ಎಂದು ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಸೂಚಿಸಿ ವಿಚಾರಣೆಯನ್ನು ಬುಧವಾರಕ್ಕೆ (ಜುಲೈ 24) ಮುಂದೂಡಿತು.
ಇದಕ್ಕೂ ಮುನ್ನ, ಅರ್ಜಿದಾರರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಪಿ ಬಿ ವರಾಳೆ ಅವರ ವಿಭಾಗೀಯ ಪೀಠವು ಕರ್ನಾಟಕ ಹೈಕೋರ್ಟ್ ಸಂಪರ್ಕಿಸಲು ಸೋಮವಾರ ಆದೇಶಿಸಿ, ಅರ್ಜಿ ವಜಾ ಮಾಡಿತ್ತು.