ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತಪಟ್ಟ ಕನ್ನಡಿಗರಿಗೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಯನಾಡು ಭೂಕುಸಿತದಲ್ಲಿ ಸಾವಿನ ಸಂಖ್ಯೆ ಏರುತ್ತಲೇ ಹೋಗುತ್ತಿದೆ. ಇದೊಂದು ಅತ್ಯಂತ ಘೋರ ದುರಂತ. ಈ ದುರಂತದಲ್ಲಿ ಕನ್ನಡಿಗರು ಪ್ರಾಣ ಕಳೆದುಕೊಂಡದ್ದು ಮತ್ತಷ್ಟು ನೋವುಂಟು ಮಾಡಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.
ಈಗಾಗಲೇ ರಾಜ್ಯದ ಇಬ್ಬರು ಹಿರಿಯ ಐಎಎಸ್ ಅಧಿಕಾರಿಗಳು, ಎನ್‌ಡಿಆರ್‌ಎಫ್ ತಂಡ ಮತ್ತು ಸೇನಾ ಪಡೆಯ ತಂಡಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಇಂದು ರಕ್ಷಣಾ ಕಾರ್ಯದ ಉಸ್ತುವಾರಿಗಾಗಿ ಸಚಿವರಾದ ಸಂತೋಷ್ ಲಾಡ್ ಅವರನ್ನು ವಯನಾಡಿಗೆ ಕಳುಹಿಸಿಕೊಡಲಾಗುತ್ತಿದೆ ಎಂದು ತಿಳಿಸಿದರು.
ಸಂತ್ರಸ್ತರ ಪ್ರಾಣ ರಕ್ಷಣೆ ನಮ್ಮ ಮೊದಲ ಆದ್ಯತೆಯಾಗಿದ್ದು, ಸಂಕಷ್ಟದಲ್ಲಿರುವ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ನಮ್ಮ ಸರ್ಕಾರ ಶಕ್ತಿಮೀರಿ ಶ್ರಮಿಸುತ್ತಿದೆ. ದುರಂತದಲ್ಲಿ ಮೃತಪಟ್ಟ ಕನ್ನಡಿಗರಿಗೆ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದರು.