ಮೈಸೂರು(Mysuru): ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘದ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾ ನ್ಯಾಯಾಲಯದ ಮುಂದಿನ ಮಹಾತ್ಮ ಗಾಂಧಿ ಪುತ್ಥಳಿ ಮುಂದೆ ಸೇರಿದ ಕಾರ್ಯಕರ್ತರು ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ಮಾತನಾಡಿದ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಇದುವರೆಗೂ ಕೇವಲ ಅಧಿಕಾರಿಗಳು, ರಾಜಕಾರಣಿಗಳಷ್ಟೇ ಭ್ರಷ್ಟರಾಗಿದ್ದರು. ಹೋರಾಟಗಾರರೂ ಭ್ರಷ್ಟರಾಗಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಆರೋಪಗಳ ವಿರುದ್ಧ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ಮಾಡಬೇಕು. ಈ ಮೂಲಕ ಹೋರಾಟದ ಪಾವಿತ್ರ್ಯತೆಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.