ಮನೆ ರಾಜಕೀಯ ನಿರ್ಮಲಾ ಸೀತಾರಾಮನ್‌ ಪ್ರಕರಣಕ್ಕೂ, ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್‌.ಅಶೋಕ

ನಿರ್ಮಲಾ ಸೀತಾರಾಮನ್‌ ಪ್ರಕರಣಕ್ಕೂ, ಸಿದ್ದರಾಮಯ್ಯ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ: ಆರ್‌.ಅಶೋಕ

0

ಬೆಂಗಳೂರು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಇತರರ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

Join Our Whatsapp Group

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿರುದ್ಧ ಎಫ್‌ಐಆರ್‌ ದಾಖಲಿಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿರುವುದಕ್ಕೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಡಾ ಹಗರಣಕ್ಕೂ ಅಜಗಜಾಂತರ ವ್ಯತ್ಯಾಸವಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ವಜನ ಪಕ್ಷಪಾತ ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಬೆಲೆಬಾಳುವ ಜಮೀನನ್ನು ಸಿಎಂ ಕಬಳಿಸಿದ್ದಾರೆ. ನಿರ್ಮಲಾ ಸೀತಾರಾಮನ್‌ ಅವರು ತಮ್ಮ ಸ್ವಂತಕ್ಕಾಗಿ ಏನೂ ಮಾಡಿಲ್ಲ. ಆ ಹಣ ಪಕ್ಷಕ್ಕೆ ಬಂದಿದೆ. ಕಾಂಗ್ರೆಸ್‌ ಪಕ್ಷಕ್ಕೂ 1,200 ಕೋಟಿ ರೂ.ಗೂ ಅಧಿಕ ಹಣ ಬಂದಿದೆ. ಆ ಹಣವನ್ನು ಮೊದಲು ವಾಪಸ್‌ ನೀಡಲಿ, ಆ ನಂತರ ಸಚಿವರ ರಾಜೀನಾಮೆ ಕೇಳಲಿ ಎಂದರು.

ಎಲ್ಲ ಪಕ್ಷಗಳು ದೇಣಿಗೆ ಸಂಗ್ರಹ ಮಾಡಿವೆ. ಹೀಗೆ ಹಣ ತೆಗೆದುಕೊಂಡವರ ಮೇಲೆ ಎಫ್‌ಐಆರ್‌ ದಾಖಲಿಸುವುದಾದರೆ, ಎಲ್ಲರ ಮೇಲೂ ದಾಖಲಿಸಬೇಕಾಗುತ್ತದೆ. ಸಿಎಂ ಸಿದ್ದರಾಮಯ್ಯ ಅವರೇ ಯಾರಿಂದಲೋ ಹೇಳಿಸಿ ದೂರು ದಾಖಲಿಸಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ. ಹೀಗೆ ದೂರು ದಾಖಲಿಸಿರುವುದು ರಾಜಕೀಯ ಪ್ರೇರಿತ ಎಂದರು.

ಸಿಎಂ ಸಿದ್ದರಾಮಯ್ಯನವರ ಪ್ರಕರಣ ಕ್ಯಾಬೆನೆಟ್‌ನಲ್ಲಿ ಚರ್ಚೆಯಾಗಿರಲಿಲ್ಲ. ಆದರೆ ಚುನಾವಣಾ ಬಾಂಡ್‌ ಬಗ್ಗೆ ಕ್ಯಾಬಿನೆಟ್‌ನಲ್ಲೇ ಚರ್ಚೆಯಾಗಿ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಡಾ ಹಗರಣದ ಆರೋಪದಿಂದ ತಪ್ಪಿಸಿಕೊಳ್ಳಲು ಕಾಂಗ್ರೆಸ್‌ ನಾಯಕರು ಹೀಗೆ ಮಾತಾಡುತ್ತಿದ್ದಾರೆ. ಮೊದಲು ಲೋಕಾಯುಕ್ತ ಮುಚ್ಚಿಹಾಕಲು ಪ್ರಯತ್ನ ಮಾಡಿದ್ದರು. ಈಗ ಸಿಬಿಐ ಅಧಿಕಾರ ಕಿತ್ತುಕೊಳ್ಳಲು ಕ್ರಮ ವಹಿಸಿದ್ದಾರೆ. ಕಾಂಗ್ರೆಸ್‌ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಅನೇಕ ಹಗರಣಗಳನ್ನು ಮಾಡಿ ನುಂಗಿ ನೀರು ಕುಡಿದಿದ್ದರು ಎಂದರು.

ಮುಖ್ಯಮಂತ್ರಿ ಸ್ಥಾನದಲ್ಲಿ ಸಿದ್ದರಾಮಯ್ಯ ಇದ್ದರೆ, ಅವರು ಪೊಲೀಸರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಅದಕ್ಕಾಗಿ ರಾಜೀನಾಮೆ ನೀಡಲು ಆಗ್ರಹಿಸುತ್ತಿದ್ದೇವೆ. ಆದರೆ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರಿಗೂ ರಾಜ್ಯ ಪೊಲೀಸರಿಗೂ ಸಂಬಂಧವಿಲ್ಲ. ಕುಮಾರಸ್ವಾಮಿ ಅಧಿಕಾರ ದುರ್ಬಳಕೆ ಮಾಡಲು ಆಗುವುದಿಲ್ಲ. ಯಾವ್ಯಾವುದೋ ಪ್ರಕರಣಕ್ಕೆ ಮುಡಾ ಹಗರಣವನ್ನು ಹೋಲಿಸುವುದು ಬೇಡ ಎಂದರು.