ಮನೆ ರಾಷ್ಟ್ರೀಯ ಜಮ್ಮು ಮತ್ತು ಕಾಶ್ಮೀರ: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ

ಜಮ್ಮು ಮತ್ತು ಕಾಶ್ಮೀರ: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ

0

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ ಚುನಾವಣೆಯ ಮೂರನೇ ಮತ್ತು ಅಂತಿಮ ಹಂತದ ಮತದಾನ ಪ್ರಕ್ರಿಯೆ ಇಂದು ಮಂಗಳವಾರ(ಅ. ೧) ರಂದು ಆರಂಭಗೊಂಡಿದೆ, ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ 10 ವರ್ಷಗಳ ನಂತರ ವಿಧಾನಸಭೆ ಚುನಾವಣೆ ನಡೆಯುತ್ತಿದೆ.

Join Our Whatsapp Group

ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6ರವರೆಗೆ ನಡೆಯಲಿದೆ. ಜಮ್ಮುವಿನ 24 ವಿಧಾನಸಭಾ ಸ್ಥಾನಗಳು ಮತ್ತು ಕಾಶ್ಮೀರ ಕಣಿವೆಯ 16 ವಿಧಾನಸಭಾ ಸ್ಥಾನಗಳನ್ನು ಒಳಗೊಂಡಿರುವ 5,060 ಮತಗಟ್ಟೆಗಳಲ್ಲಿ 39.18 ಲಕ್ಷಕ್ಕೂ ಹೆಚ್ಚು ಮತದಾರರು ಮತ ಚಲಾಯಿಸಲಿದ್ದಾರೆ.

ಕೊನೆಯ ಹಂತದ ಮತದಾನ ಪ್ರಕ್ರಿಯೆಯಲ್ಲಿ ಒಟ್ಟು 415 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಇದರೊಂದಿಗೆ ಎಲ್ಲಾ 90 ವಿಧಾನಸಭಾ ಸ್ಥಾನಗಳಿಗೆ ಮತದಾನ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಅಕ್ಟೋಬರ್ 8 ರಂದು ಫಲಿತಾಂಶ ಹೊರಬೀಳಲಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು 24 ಸ್ಥಾನಗಳಿಗೆ ಮತದಾನ ನಡೆದಿತ್ತು. ಸೆಪ್ಟೆಂಬರ್ 25 ರಂದು ಎರಡನೇ ಹಂತದಲ್ಲಿ 40 ಸ್ಥಾನಗಳಿಗೆ ಮತದಾನ ನಡೆದಿತ್ತು.

ಮತದಾನ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆ ಒದಗಿಸಲಾಗಿದೆ, ಅಂತೆಯೇ ಮತದಾರರೂ ಶಾಂತಿಯುತವಾಗಿ ಮತದಾನ ಪ್ರಕ್ರಿಯೆಯಲ್ಲಿ ಭಾಗಿಯಾಗಿದ್ದಾರೆ.