ಮನೆ ರಾಜ್ಯ ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಭಾರೀ ಪ್ರತಿಭಟನೆ

ಎಡಿಜಿಪಿ ಚಂದ್ರಶೇಖರ್ ವಿರುದ್ಧ ಜೆಡಿಎಸ್ ಭಾರೀ ಪ್ರತಿಭಟನೆ

ಅಧಿಕಾರಿ ಕೂಡಲೇ ಕೇಂದ್ರ ಸಚಿವರ ಬೇಷರತ್ ಕ್ಷಮೆ ಕೇಳಬೇಕು ಎಂದು ಒತ್ತಾಯ

0

ಬೆಂಗಳೂರು: ಕೇಂದ್ರದ ಉಕ್ಕು ಮತ್ತು ಭಾರೀ  ಕೈಗಾರಿಕೆ ಸಚಿವರು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಿದ ಐಪಿಎಸ್ ಅಧಿಕಾರಿ, ಲೋಕಾಯುಕ್ತ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಜೆಡಿಎಸ್ ಕಾರ್ಯಕರ್ತರು ಭಾರೀ ಪ್ರತಿಭನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Join Our Whatsapp Group

ಪಕ್ಷದ ರಾಜ್ಯ ಕಚೇರಿ ಮುಂಭಾಗದಲ್ಲಿ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ, ಟಿ.ಎ.ಶರವಣ, ಜವರಾಯಿ ಗೌಡ, ಜೆಡಿಎಸ್ ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ ಸೇರಿದಂತೆ ಅನೇಕ ನಾಯಕರು, ನೂರಾರು ಕಾರ್ಯಕರ್ತರು ಭಾಗವಹಿಸಿ ಅಧಿಕಾರಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರಮೇಶ್ ಗೌಡ; ಓರ್ವ ಅಧಿಕಾರಿಯಾಗಿ ಚಂದ್ರಶೇಖರ್ ಅವರು ಕೇಂದ್ರ ಸಚಿವರ ಬಗ್ಗೆ ಬಳಕೆ ಮಾಡಿರುವ ಭಾಷೆ ಸರಿ ಇಲ್ಲ. ಅದಕ್ಕೆ ಕ್ಷಮೆ ಕೇಳಬೇಕು ಹಾಗೂ ಅವರ ಶಿಸ್ತು ಜರುಗಿಸಬೇಕು ಎಂದು ಒತ್ತಾಯ ಮಾಡಿದರು.

ಅವರ ಹೇಳಿಕೆಯಿಂದ ಕುಮಾರಸ್ವಾಮಿ ಅವರ ಅಭಿಮಾನಿಗಳು ಹಾಗೂ ಅಸಂಖ್ಯಾತ ಜೆಡಿಎಸ್ ಕಾರ್ಯಕರ್ತರ ಭಾವನೆಗಳಿಗೆ ಘಾಸಿ ಉಂಟಾಗಿದೆ. ಕಾಂಗ್ರೆಸ್ ಸರ್ಕಾರ ನಮ್ಮ ನಾಯಕರ ವಿರುದ್ಧ ಅಧಿಕಾರಿಗಳನ್ನು ಎತ್ತಿ ಕಟ್ಟುತ್ತಿದೆ ಎಂದು ಅವರು ಹೇಳಿದರು.

ಇದೇ ವೇಳೆ ಹಿರಿಯ ಶಾಸಕರಾದ ತಿಪ್ಪೇಸ್ವಾಮಿ, ಶರವಣ ಅವರು ಕೂಡಾ ಎಡಿಜಿಪಿ ಹೇಳಿಕೆಯನ್ನು ಉಗ್ರ ಶಬ್ದಗಳಲ್ಲಿ ಖಂಡಿಸಿದರು.

ಈ ಸಂದರ್ಭದಲ್ಲಿ ಕಾರ್ಯಕರ್ತರು ಪಕ್ಷದ ಕಚೇರಿಯಲ್ಲಿ ಮುಖ್ಯರತೆಯವರೆಗೂ ಮೆರವಣಿಗೆ ನಡೆಸಿ ಅಧಿಕಾರಿ ಚಂದ್ರಶೇಖರ್ ವಿರುದ್ಧ ಧಿಕ್ಕಾರ ಕೂಗಿದರು ಹಾಗೂ ಅಧಿಕಾರಿ ಕೂಡಲೇ ಕೇಂದ್ರ ಸಚಿವರ ಕ್ಷಮೆ ಯಾಚಿಸಬೇಕು ಎಂದು ಒತ್ತಾಯಿಸಿದರು. ಒಂದು ವೇಳೆ ಕ್ಷಮೆ ಕೇಳದಿದ್ದರೆ ನಗರದ ಎಲ್ಲೆಡೆ ಉಗ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಹಾಗೂ ಮುಂದೆ ಆಗಬಹುದಾದ ಪರಿಣಾಮಗಳಿಗೆ ಸರಕಾರವೇ ಹೊಣೆ ಆಗಬೇಕಾಗುತ್ತದೆ ಎಚ್ಚರಿಕೆ ಕೊಟ್ಟರು.

ವಿಧಾನ ಪರಿಷತ್‌ ಮಾಜಿ ಸದಸ್ಯರಾದ ಚೌಡರೆಡ್ಡಿ ತೂಪಲ್ಲಿ, ಮಹಿಳಾ ಘಟಕದ ರಾಜ್ಯಾಧ್ಯಕ್ಷರಾದ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷರಾದ ಶೈಲಜಾ ರಾವ್, ಬೆಂಗಳೂರು ಮಹಾನಗರದ ಹಿಂದುಳಿದ ವರ್ಗಗಳ ಅಧ್ಯಕ್ಷರಾದ ತುಳಸೀ ರಾಮ್‌, ಪಾಲಿಕೆಯ ಮಾಜಿ ಸದಸ್ಯರಾದ ತಿಮ್ಮೇಗೌಡರು, ವಕ್ತಾರರುಗಳಾದ ದೇವರಾಜು, ಪೂರ್ಣಿಮ ಗೌಡ, ಬೆಂಗಳೂರು ಘಟಕದ ವಿವಿಧ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.