ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಯಲ್ಲಿ ಸರಳ ಬಹುಮತ ಗಳಿಸಿರುವ ಬೆನ್ನಲ್ಲೇ ಬಿಜೆಪಿ ಪಾಳಯದಲ್ಲಿ ಸತತ ಮೂರನೇ ಬಾರಿಗೆ ಸರ್ಕಾರ ರಚಿಸುವ ಚಟುವಟಿಕೆಗಳು ಗರಿಗೆದರಿವೆ.
90 ಸದಸ್ಯ ಬಲದ ಹರಿಯಾಣ ವಿಧಾನಸಭೆ ಚುನಾವಣೆಯ ಫಲಿತಾಂಶ ಅಕ್ಟೋಬರ್ 8ರಂದು ಪ್ರಕಟಗೊಂಡಿತ್ತು. 48 ಸ್ಥಾನಗಳಲ್ಲಿ ಜಯ ಗಳಿಸಿರುವ ಬಿಜೆಪಿ ಹ್ಯಾಟ್ರಿಕ್ ಗೆಲುವಿನ ಸಾಧನೆಯೊಂದಿಗೆ ಅಧಿಕಾರವನ್ನು ಉಳಿಸಿಕೊಂಡಿದೆ.
ಮುಖ್ಯಮಂತ್ರಿ ನಾಯಬ್ ಸಿಂಗ್ ಸೈನಿ ಇಂದು ದೆಹಲಿಯಲ್ಲಿ ಬಿಜೆಪಿಯ ಹಿರಿಯ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.
ಸೈನಿ ಅವರು ಹಿರಿಯ ನಾಯಕರೊಂದಿಗೆ ಸಮಾಲೋಚಿಸದ ಬಳಿಕ ಸಂಪುಟವನ್ನು ಅಂತಿಮಗೊಳಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಸರ್ಕಾರದ ಜನಪರ ನೀತಿಗಳಿಗೆ ಜನರು ಮುದ್ರೆ ಒತ್ತಿದ್ದಾರೆ ಎಂದು ಗೆಲುವಿನ ಬಳಿಕ ಸೈನಿ ಪ್ರತಿಕ್ರಿಯಿಸಿದ್ದರು.
ಹರಿಯಾಣದಲ್ಲಿ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಾಗ ಮುಖ್ಯಮಂತ್ರಿ ಬದಲಾವಣೆ ಮಾಡಲಾಯಿತು. ಹರಿಯಾಣದ ಪ್ರಬಲ ನಾಯಕ ಮನೋಹರ ಲಾಲ್ ಖಟ್ಟರ್ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿ ಒಬಿಸಿ ಸಮುದಾಯಕ್ಕೆ ಸೇರಿದ ನಾಯಕ ನಾಯಬ್ ಸಿಂಗ್ ಸೈನಿ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲಾಯಿತು.