ಚಿಕ್ಕಮಗಳೂರು: ಜಿಲ್ಲೆಯಲ್ಲಿ ಹಿಂಗಾರುಮಳೆ ವಾಡಿಕೆಗಿಂತ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಸೋಮವಾರದಿಂದ (ಅ21) ಮುಂದಿನ ಮೂರು ದಿನಗಳ ಕಾಲ ಹಳದಿ ಅಲರ್ಟ್ ಘೋಷಿಸಲಾಗಿದೆ.
ಹಳ್ಳ, ಕೆರೆ, ನದಿಗಳು ತುಂಬಿ ಅಪಾಯಕಾರಿ ಮಟ್ಟ ಮೀರಿ ಹರಿಯುತ್ತಿದ್ದು ಹಲವೆಡೆ ಭೂಕುಸಿತ ಸಹ ಉಂಟಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರಿಗೆ ಮುಂದಿನ ಒಂದು ವಾರದವರೆಗೆ ಅಥವಾ ಮಳೆ ಕಡಿಮೆಯಾಗುವವರೆಗೂ ಜಿಲ್ಲಾ ಪ್ರವಾಸವನ್ನು ಕೈಗೊಳ್ಳದಂತೆ ಜಿಲ್ಲಾಡಳಿತ ಸೂಚನೆ ನೀಡಿದೆ.
ಸಾರ್ವಜನಿಕರು, ಪ್ರವಾಸಿಗರು ನದಿಗಳಿಗೆ ಅಥವಾ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರವಹಿಸುವಂತೆ ಜನರು ಜಾನುವಾರುಗಳನ್ನು ಶುಚಿಗೊಳಿಸಲು ಅಥವಾ ಬಟ್ಟೆಗಳನ್ನು ತೊಳೆಯಲು ಹಳ್ಳಿ, ಕೆರೆಕಟ್ಟೆಗಳಿಗೆ ತೆರಳದಂತೆ, ಮಳೆಯಿಂದ ಧರೆ. ಗುಡ್ಡಕುಸಿತ ಉಂಟಾಗುವ ಸಂಭವವಿರುವುದರಿಂದ ಚಾರಣಿಗರು ಹಾಗೂ ಹೋಂಸ್ಟೇ, ರೆಸಾರ್ಟ್, ಅರಣ್ಯ ಇಲಾಖೆ ವತಿಯಿಂದ ಕೈಗೊಳ್ಳುವ ಟ್ರಕ್ಕಿಂಗ್ ಒಂದು ವಾರ ಸ್ಥಗಿತಗೊಳಿಸುವಂತೆ ಸೂಚಿಸಿದೆ.
ಜಿಲ್ಲೆಯಲ್ಲಿರುವ ಪ್ರವಾಸಿತಾಣಗಳಿಗೆ ಆಗಮಿಸುವ ಪ್ರವಾಸಿ ಗರು ಚಿಕ್ಕಮಗಳೂರು ಜಿಲ್ಲಾ ಪ್ರವಾಸವನ್ನು ಒಂದುವಾರ ಕಾಲ ಮುಂದೂಡುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಮನವಿ ಮಾಡಿದ್ದಾರೆ.