ಬೆಂಗಳೂರು: ದೀಪಾವಳಿ ಸಂದರ್ಭದಲ್ಲಿ ಹಸಿರು ಪಟಾಕಿಗೆ ಮಾತ್ರ ಅವಕಾಶವಿದ್ದು, ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡಬಾರದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಜೊತೆ ಇಂದು ನಡೆಸಿದ ವೀಡಿಯೋ ಸಂವಾದದಲ್ಲಿ ಅವರು ಈ ಬಗ್ಗೆ ಸೂಚನೆ ನೀಡಿದ್ದಾರೆ.
ಪಟಾಕಿ ದಾಸ್ತಾನು, ಮಾರಾಟ ಪ್ರಕ್ರಿಯೆಯಲ್ಲಿ ಸುರಕ್ಷತೆ ವಿಷಯದಲ್ಲಿ ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಈ ಕುರಿತು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಮುಖ್ಯಮಂತ್ರಿ ಸೂಚಿಸಿದರು.
ದೀಪಾವಳಿ ವೇಳೆ ಹಸಿರು ಪಟಾಕಿಗೆ ಮಾತ್ರ ಅವಕಾಶ ನೀಡಲಾಗುತ್ತದೆ. ಪಟಾಕಿ ಅವಘಡ ಆಗದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ. ಪರಿಸರಕ್ಕೆ ಹಾನಿಯಾಗುವ ಪಟಾಕಿಗಳಿಗೆ ಅವಕಾಶ ನೀಡಬಾರದು. ಈ ಕುರಿತು ಡಿಸಿಗಳು, ಎಸ್ಪಿಗಳಿಗೆ ಸೂಚನೆ ನೀಡಿದ್ದೇನೆ. ರಾತ್ರಿ 8ರಿಂದ 10ರ ವರೆಗೆ ಮಾತ್ರ ಪಟಾಕಿ ಸಿಡಿಸಬೇಕು. ಅಧಿಕಾರಿಗಳು ಪಟಾಕಿ ದಾಸ್ತಾನುಗಳ ಪರಿಶೀಲನೆ ಮಾಡಬೇಕು. ಹಸಿರು ಪಟಾಕಿ ಬಿಟ್ಟು ಬೇರೆ ಪಟಾಕಿ ಮಾರಾಟ ಮಾಡಬಾರದು. ನಿಯಮ ಮೀರಿದರೇ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.