ಹಾಸನ: ಚುನಾವಣಾಧಿಕಾರಿ ಅನುಮತಿ ಪಡೆಯದೇ ಕಾಂಗ್ರೆಸ್ ಅಭ್ಯರ್ಥಿ ಪರ ಕರಪತ್ರ ಮುದ್ರಿಸಿದ ಪ್ರಿಂಟಿಂಗ್ ಪ್ರೆಸ್ ಮಾಲೀಕ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ದೇವರಾಜೇಗೌಡ ವಿರುದ್ಧ ಚುನಾವಣಾ ಅಧಿಕಾರಿಗಳು ಪ್ರಕರಣ ದಾಖಲಿಸಿದ್ದು, ಪ್ರಿಂಟಿಂಗ್ ಪ್ರೆಸ್‌ಗೆ ಬೀಗಮುದ್ರೆ ಹಾಕಿದ್ದಾರೆ.
ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿರುವ ಶ್ರೀನಿಧಿ ಪ್ರಿಂಟರ್ಸ್ ಮಾಲೀಕ ಬಾಲಾಜಿ ಹಾಗೂ ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ದೇವರಾಜೇಗೌಡ ಮೇಲೆ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರವಾಸಿ ಮಂದಿರಕ್ಕೆ ಬಂದ ದಿನಪತ್ರಿಕೆಯೊಳಗಿದ್ದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪರ ಮತ ಕೋರಿ ಹೊರಡಿಸಿದ್ದ ಕರಪತ್ರವನ್ನು ಸಹಾಯಕ ಚುನಾವಣಾಧಿಕಾರಿ ರಕ್ಷಿತ್ ಪರಿಶೀಲಿಸಿದ್ದು, ಅದನ್ನು ಮುದ್ರಿಸಲು ಪೂರ್ವಾನುಮತಿ ಪಡೆಯದಿರುವುದು ಕಂಡು ಬಂದಿದೆ.
ಈ ಹಿನ್ನೆಲೆಯಲ್ಲಿ ಅವರ ಸೂಚನೆಯಂತೆ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಗಳು ಪ್ರಿಂಟಿಂಗ್ ಪ್ರೆಸ್‌ಗೆ ತೆರಳಿ ಪರಿಶೀಲನೆ ನಡೆಸಿದ್ದು, ಮಾಲೀಕರು ಅನುಮತಿ ನೀಡಿರಲಿಲ್ಲ. ಹೀಗಾಗಿ ಅವರ ಮೇಲೆ ಪ್ರಕರಣ ದಾಖಲಿಸಲಾಗಿದೆ.