ಹಾಸನ : ಮಕ್ಕಳ ನಡುವೆ ನಡೆದಿದ್ದ ಜಗಳ ತಂದೆಯ ಕೊಲೆಯಲ್ಲಿ ಅಂತ್ಯವಾದ ಘಟನೆ ಅರಸೀಕೆರೆ ತಾಲೂಕಿನ ಮುಜವಾರ್ ಮೊಹಲ್ಲಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ತೌಫಿಕ್ (28) ಎಂದು ಗುರುತಿಸಲಾಗಿದೆ.
ಅರಸೀಕೆರೆ ನಗರದ ಖಾಸಗಿ ಶಾಲೆಯಲ್ಲಿ ಓದುತ್ತಿದ್ದ ತೌಫಿಕ್ ಹಾಗೂ ಫರಾನ್ ಪುತ್ರರು ಆ.25 ರಂದು ಕ್ಷುಲ್ಲಕ ಕಾರಣಕ್ಕೆ ಶಾಲೆಯಲ್ಲಿ ಗಲಾಟೆ ಮಾಡಿಕೊಂಡಿದ್ದರು. ಕಳೆದ ನಾಲ್ಕು ದಿನಗಳ ಹಿಂದೆ ಅರಸೀಕೆರೆಯ ಬಿಹೆಚ್ ರಸ್ತೆಯಲ್ಲಿರುವ ಅಂಗಡಿಯಲ್ಲಿ ಎದುರಾದ ತೌಫಿಕ್ ಹಾಗೂ ಫರಾನ್ ಇದೇ ವಿಚಾರಕ್ಕೆ ಗಲಾಟೆ ಮಾಡಿಕೊಂಡಿದ್ದರು.
ಜಗಳ ಅತಿರೇಕಕ್ಕೆ ತಿರುಗಿ ಫರಾನ್, ತೌಫಿಕ್‍ನನ್ನು ತಳ್ಳಿದ್ದ. ಈ ವೇಳೆ ಮೇಲಿನಿಂದ ಮೆಟ್ಟಿಲುಗಳ ಮೇಲೆ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ತೌಫಿಕ್‍ನನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಅವರು ಸಾವನ್ನಪ್ಪಿದ್ದರು.
ತೌಫಿಕ್ ಸಾವಿನಿಂದ ರೊಚ್ಚಿಗೆದ್ದ ಕುಟುಂಬಸ್ಥರು, ರಾತ್ರಿ ಫರಾನ್ ಮನೆಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ. ಕಾರಿಗೆ ಬೆಂಕಿ ಹಚ್ಚಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸೃಷ್ಟಿಯಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಶಾಸಕ ಕೆ.ಎಂ.ಶಿವಲಿಂಗೇಗೌಡ ಮೃತನ ಅಂತಿಮ ದರ್ಶನ ಪಡೆದಿದ್ದಾರೆ. ಈ ಘಟನೆ ಸಂಬಂಧ ಪೊಲೀಸರ ನಿರ್ಲಕ್ಷ್ಯಕ್ಕೆ ಅಸಮಾಧಾನ ಹೊರಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಆಗಲಿ ಎಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ.














