ಉತ್ತರ ಪ್ರದೇಶ್ ಟಿ20 ಲೀಗ್ನ 29ನೇ ಪಂದ್ಯದಲ್ಲಿ ಸ್ವಸ್ತಿಕ್ ಚಿಕಾರ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಐಪಿಎಲ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದ, ಸ್ವಸ್ತಿಕ್ ನೋಯ್ಡಾ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಸಿಡಿಸಿದರು.
ಲಕ್ನೋನ ಏಕಾನ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ, ರಿಂಕು ಸಿಂಗ್ ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ನೋಯ್ಡಾ ಕಿಂಗ್ಸ್ ತಂಡವು 20 ಓವರ್ಗಳಲ್ಲಿ 3 ವಿಕೆಟ್ ಕಳೆದುಕೊಂಡು 200 ರನ್ ಕಲೆಹಾಕಿತು.
201 ರನ್ಗಳ ಕಠಿಣ ಗುರಿಯನ್ನು ಬೆನ್ನತ್ತಿದ ಮೀರತ್ ಮಾವೆರಿಕ್ಸ್ ತಂಡಕ್ಕೆ ಸ್ವಸ್ತಿಕ್ ಚಿಕಾರ ಸಿಡಿಲಬ್ಬರದ ಆರಂಭ ಒದಗಿಸಿದರು. 38 ಎಸೆತಗಳನ್ನು ಎದುರಿಸಿದ ಚಿಕಾರ 7 ಭರ್ಜರಿ ಸಿಕ್ಸ್ ಹಾಗೂ 2 ಫೋರ್ಗಳೊಂದಿಗೆ 64 ರನ್ ಚಚ್ಚಿದರು. ಆ ಬಳಿಕ ಬಂದ ರಿಂಕು ಸಿಂಗ್ 12 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 3 ಫೋರ್ಗಳೊಂದಿಗೆ 37 ರನ್ ಬಾರಿಸಿದರು.
ಈ ಮೂಲಕ ಮೀರತ್ ಮಾವೆರಿಕ್ಸ್ ತಂಡವು 18.3 ಓವರ್ಗಳಲ್ಲಿ 202 ರನ್ಗಳಿಸಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಈ ಗೆಲುವಿನೊಂದಿಗೆ ರಿಂಕು ಸಿಂಗ್ ಮುಂದಾಳತ್ವದ ಮೀರತ್ ಮಾವೆರಿಕ್ಸ್ ತಂಡ ಅಂಕ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದೆ.














