ಮುಂಬೈ(ಮಹಾರಾಷ್ಟ್ರ್ರ): ಮುಂಬೈನ ಕರಾವಳಿ ರಸ್ತೆಯಲ್ಲಿ ಚಲಿಸುತ್ತಿದ್ದ ಲ್ಯಾಂಬೋರ್ಗಿನಿ ಕಾರಿನಲ್ಲಿ ಇದ್ದಕಿದ್ದಂತೆ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬುಧವಾರ ರಾತ್ರಿ 10.20ರ ಸುಮಾರಿಗೆ ಈ ಘಟನೆ ನಡೆದಿದೆ. ತಕ್ಷಣವೇ ಘಟನಾ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಸಿಬ್ಬಂದಿ ಸುಮಾರು 45 ನಿಮಿಷಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾರಿನಲ್ಲಿ ಎಷ್ಟು ಮಂದಿಯಿದ್ದರು ಹಾಗೂ ಘಟನೆಗೆ ಕಾರಣವೇನು ಎಂಬ ನಿಖರ ಮಾಹಿತಿ ತಕ್ಷಣಕ್ಕೆ ಲಭ್ಯವಾಗಿಲ್ಲ.
ಉದ್ಯಮಿ ಗೌತಮ್ ಸಿಂಘಾನಿಯಾ ಎಂಬುವವರು ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್ ಖಾತೆಯಲ್ಲಿ ಹೊತ್ತಿ ಉರಿಯುತ್ತಿರುವ ಕಾರಿನ ವಿಡಿಯೊವನ್ನು ಹಂಚಿಕೊಂಡಿದ್ದಾರೆ.
ಗುಜರಾತ್ ನೋಂದಣಿ ಸಂಖ್ಯೆಯ ಕಿತ್ತಳೆ ಬಣ್ಣದ ಕಾರಿನ ಕ್ಯಾಬಿನ್‌ನಲ್ಲಿ ಬೆಂಕಿಯ ಜ್ವಾಲೆ ಹಾಗೂ ವ್ಯಕ್ತಿಯೊಬ್ಬರು ಅದನ್ನು ನಂದಿಸಲು ಪ್ರಯತ್ನಿಸುತ್ತಿರುವುದನ್ನು ವಿಡಿಯೊದಲ್ಲಿ ಕಾಣಬಹುದು.