ತಿರುವಣಮಲೈ: ವ್ಯಕ್ತಿಯೊಬ್ಬ ತನ್ನ ಪತ್ನಿ ಮತ್ತು ನಾಲ್ವರು ಮಕ್ಕಳನ್ನು ಕೊಂದು ಬಳಿಕ ತಾನೂ ನೇಣಿಗೆ ಶರಣಾಗಿರುವ ಘಟನೆ ತಮಿಳುನಾಡಿನ ತಿರುವಣ್ಣಮಲೈ ಜಿಲ್ಲೆಯ ಚೆಂಗಂ ತಾಲೂಕಿನಲ್ಲಿ ನಡೆದಿದೆ.
ಮೃತರಲ್ಲಿ ಇಬ್ಬರು ಹದಿಹರೆಯದ ಹೆಣ್ಣುಮಕ್ಕಳಿದ್ದರು. ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿರುವ 9 ವರ್ಷದ ಮಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಟುಂಬವನ್ನೇ ಕೊಂದ ವ್ಯಕ್ತಿಯನ್ನು 45 ವರ್ಷದ ಪಳನಿಸ್ವಾಮಿ ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಘಟನೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.
ಅನುಮಾನಗೊಂಡ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಪೊಲೀಸರು ಮನೆಯ ಬಾಗಿಲು ತೆರೆದಾಗ ಪಳನಿಸ್ವಾಮಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತಪಟ್ಟಿರುವುದು, 37 ವರ್ಷದ ಹೆಂಡತಿ, ಮೂವರು ಹೆಣ್ಣುಮಕ್ಕಳು ಮತ್ತು ಒಬ್ಬ ಗಂಡು ಮಗ ಸಾವಿಗೀಡಾಗಿರುವುದು ಕಂಡುಬಂದಿದೆ.
ಗಾಯಗೊಂಡಿದ್ದ 9 ವರ್ಷದ ಬಾಲಕಿಯನ್ನು ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.