ತೆಲಂಗಾಣ: ತೆಲಂಗಾಣದ ಕಾಮರೆಡ್ಡಿ ಜಿಲ್ಲಾ ಕೇಂದ್ರದಲ್ಲಿರುವ ಅಯ್ಯಪ್ಪ ಶಾಪಿಂಗ್ ಮಾಲ್ ನಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದೆ.
ಬುಧವಾರ ರಾತ್ರಿ 11.30ರ ವೇಳೆಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಶಾಪಿಂಗ್ ಮಾಲ್ ನ ನಾಲ್ಕು ಮಹಡಿಗಳಿಗೆ ಬೆಂಕಿ ಕ್ರಮೇಣ ವ್ಯಾಪಿಸಿತು. ಈ ಅವಘಡದಲ್ಲಿ ಶಾಪಿಂಗ್ ಮಾಲ್ನಲ್ಲಿದ್ದ ವಸ್ತುಗಳು ಸುಟ್ಟು ಕರಕಲಾಗಿವೆ.
ಸ್ಥಳೀಯರ ಮಾಹಿತಿ ಮೇರೆಗೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಬೆಳಗ್ಗೆ 7 ಗಂಟೆ ವೇಳೆಗೆ ಎರಡು ಮಹಡಿಗಳಲ್ಲಿ ಬೆಂಕಿಯನ್ನು ಹತೋಟಿಗೆ ತರಲಾಯಿತು. ಆದರೆ ಇನ್ನೆರಡು ಮಹಡಿಗಳಲ್ಲಿ ಬೆಂಕಿ ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ.
ಈ ಅವಘಡದಲ್ಲಿ ಕೋಟ್ಯಾಂತರ ರೂಪಾಯಿ ಮೌಲ್ಯದ ಆಸ್ತಿಪಾಸ್ತಿ ಹಾನಿ ಸಂಭವಿಸಿರಬಹುದು ಎಂದು ಅಧಿಕಾರಿಗಳು ಅಂದಾಜಿಸಿದ್ದಾರೆ. ಆದರೆ, ಈ ಬೆಂಕಿ ಹೇಗೆ ಸಂಭವಿಸಿತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಶಾಪಿಂಗ್ ಮಾಲ್ನಲ್ಲಿ ಯಾರೂ ಇಲ್ಲದ ಕಾರಣ ಭಾರೀ ಅನಾಹುತ ತಪ್ಪಿದೆ.
ಸದ್ಯ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ.