ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೇಶದ ಶಿಕ್ಷಣ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
‘ವಿಶ್ವಗುರು’ ಎಂದು ಸರ್ಕಾರ ಹೇಳಿಕೊಳ್ಳುತ್ತಿದ್ದರೂ, ದೇಶದಲ್ಲಿ ಒಂದೇ ಒಂದು ಪರೀಕ್ಷೆಯನ್ನು ಸರಿಯಾಗಿ ನಡೆಸಲು ಸಾಧ್ಯವಾಗಿಲ್ಲ ಎಂದು ಅವರು ಟೀಕಿಸಿದ್ದಾರೆ.ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ತಾಂತ್ರಿಕ ದೋಷಗಳ ಕಾರಣದಿಂದ ಕೆಲವು ಕೇಂದ್ರಗಳಲ್ಲಿ CUET-UG 2026 ಪರೀಕ್ಷೆ ವಿಳಂಬವಾಗಿದೆ ಎಂದು ಘೋಷಿಸಿದ ಬಳಿಕ ರಾಹುಲ್ ಗಾಂಧಿ ಈ ಪ್ರತಿಕ್ರಿಯೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, “NEET, CBSE, SSC ಮತ್ತು ಈಗ CUET—ಒಂದು ಕೋಟಿ ವಿದ್ಯಾರ್ಥಿಗಳು, ಆದರೆ ಒಂದೇ ಪರೀಕ್ಷೆಯನ್ನು ಪ್ರಾಮಾಣಿಕವಾಗಿ ನಡೆಸಲು ಸಾಧ್ಯವಾಗಿಲ್ಲ” ಎಂದು ವಾಗ್ದಾಳಿ ನಡೆಸಿದ್ದಾರೆ.
ಮೋದಿ ಸರ್ಕಾರ ದೇಶದ ಶಿಕ್ಷಣ ವ್ಯವಸ್ಥೆಯನ್ನು ಹಾಳುಮಾಡಿದೆ ಎಂದು ಆರೋಪಿಸಿರುವ ಅವರು, “ನೀವು ಯಾವ ಪೀಳಿಗೆಯ ಭವಿಷ್ಯವನ್ನು ಹಾಳುಮಾಡುತ್ತೀರೋ, ಅದೇ ಪೀಳಿಗೆ ನಿಮ್ಮನ್ನು ಹೊಣೆಗಾರರನ್ನಾಗಿ ಮಾಡುತ್ತದೆ” ಎಂದು ಎಚ್ಚರಿಸಿದ್ದಾರೆ.
ಇದೇ ವೇಳೆ, ಹಿಂದಿನ ದಿನ ಸುದ್ದಿಗಾರರೊಂದಿಗೆ ಮಾತನಾಡಿದ್ದ ರಾಹುಲ್ ಗಾಂಧಿ, ಪ್ರಧಾನಿ ಮೋದಿ ಸರ್ಕಾರದ ಉಳಿವಿನ ಬಗ್ಗೆ ಮಾತ್ರ ಕಾಳಜಿ ಹೊಂದಿದ್ದು, ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಟೀಕಿಸಿದ್ದರು.ಅವರು NEET ಪರೀಕ್ಷಾ ಅವ್ಯವಸ್ಥೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಗಳ ಕುರಿತು ವಿದ್ಯಾರ್ಥಿಗಳೊಂದಿಗೆ ನಡೆಸಿದ ಸಂವಾದದ ವಿಡಿಯೋವನ್ನೂ ಹಂಚಿಕೊಂಡಿದ್ದಾರೆ.

















