ಬೆಂಗಳೂರು: ಲೋಕಸಭಾ ಚುನಾವಣೆಗೆ ಈಗಿನಿಂದಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು ಈ ಮಧ್ಯೆ ಇಬ್ಬರು ಬಿಜೆಪಿ ಶಾಸಕರು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿಯಾಗಿದ್ದು ಕುತೂಹಲ ಮೂಡಿಸಿದ್ದಾರೆ.
ಬೆಂಗಳೂರಿನ ಸದಾಶಿವನಗರದಲ್ಲಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ನಿವಾಸಕ್ಕೆ ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಭೇಟಿ ನೀಡಿ ಪರಮೇಶ್ವರ್ ಜೊತೆ ಕೆಲ ಕಾಲ ಚರ್ಚೆ ನಡೆಸಿದರು.
ಇಬ್ಬರೂ ಶಾಸಕರೂ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಈ ಬೆನ್ನಲ್ಲೇ ಎಸ್.ಟಿ.ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ಗೃಹಸಚಿವರನ್ನು ಭೇಟಿಯಾಗಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ.
ಇನ್ನು ಈ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್.ಟಿ ಸೋಮಶೇಖರ್, ಕ್ಷೇತ್ರದ ವಿಚಾರವಾಗಿ ಡಾ.ಜಿ.ಪರಮೇಶ್ವರ್ ಅವರನ್ನ ಭೇಟಿಯಾಗಿದ್ದವು. ಮಾಗಡಿ ರಸ್ತೆಯಲ್ಲಿ ಟ್ರಾಫಿಕ್ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಪೊಲೀಸ್ ಠಾಣೆಯ ಅಗತ್ಯವಿದೆ. ಅಲ್ಲಿಗೆ ಪೊಲೀಸ್ ಠಾಣೆ ನೀಡುವಂತೆ ಮನವಿ ಮಾಡಿದ್ದೇವೆ ಎಂದು ಭೇಟಿ ಬಗ್ಗೆ ಸ್ಪಷ್ಟನೆ ನೀಡಿದರು.