ಬೆಂಗಳೂರು (Bengaluru): ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ವರದಿಯನ್ನು ಜಾರಿಗೊಳಿಸುವಂತೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಶೇ.7.5 ರಷ್ಟು ಮೀಸಲಾತಿ ಕಲ್ಪಿಸಬೇಕೆಂದು ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಶ್ರೀ ಪ್ರಸನ್ನಾನಂದಪುರಿ ಮಹಾಸ್ವಾಮೀಜಿಗಳು ನಡೆಸುತ್ತಿರುವ ಧರಣಿ ಸತ್ಯಾಗ್ರಹಕ್ಕೆ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಟಿ.ದೇವೇಗೌಡ ಅವರು ಬೆಂಬಲ ಸೂಚಿಸಿದ್ದಾರೆ.
ಇಂದು ಫ್ರೀಡಂ ಪಾರ್ಕ್ ಗೆ ತೆರಳಿ ಸ್ವಾಮೀಜಿಗಳನ್ನು ಭೇಟಿಯಾಗಿ ಅವರ ಆಶೀರ್ವಾದ ಪಡೆದು ಅವರೊಂದಿಗೆ ಕೆಲಕಾಲ ಚರ್ಚಿಸಿದರು. ಈ ವೇಳೆ ಮಾತನಾಡಿದ ಅವರು, ಪರಿಶಿಷ್ಟ ಪಂಗಡಕ್ಕೆ ನ್ಯಾಯಯುತವಾದ ಮೀಸಲಾತಿ ಕೊಡಲು ಸಾಧ್ಯವಾಗದಿದ್ದರೆ ಎಲ್ಲ ವರ್ಗದ ಮೀಸಲಾತಿಯನ್ನು ರದ್ದುಗೊಳಿಸಿ ಎಂದರು.
ಸ್ವಾಮೀಜಿ ಅವರ ಈ ಹೋರಾಟ ನ್ಯಾಯಯುತವಾಗಿದೆ. ಪರಿಶಿಷ್ಟ ಪಂಗಡದವರಿಗೆ ಅನ್ಯಾಯವಾಗಿದೆ. ಅದನ್ನು ವಿರೋಧಿಸಿ ಸ್ವಾಮೀಜಿಗಳು 6 ತಿಂಗಳಿಂದ ನಿರಂತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅನ್ಯಾಯದ ವಿರುದ್ಧ ಹೋರಾಡುವುದೇ ಅವರ ಶಕ್ತಿ. ಸಾಮಾಜಿಕ ನ್ಯಾಯ, ಸಮಾನತೆಗಾಗಿ ಸ್ವಾಮೀಜಿಗಳು ಮಾಡುತ್ತಿರುವ ಹೋರಾಟವನ್ನು ಯಾರೂ ನಿರ್ಲಕ್ಷ್ಯ ಮಾಡುವಂತಿಲ್ಲ. ಪಕ್ಷಾತೀತವಾಗಿ ಈ ಹೋರಾಟಕ್ಕೆ ಬೆಂಬಲ ಸೂಚಿಸುವ ಮೂಲಕ ಹೋರಾಟಕ್ಕೆ ನಮ್ಮ ಅಳಿಲು ಸೇವೆ ಸಲ್ಲಿಸಬೇಕು. ಶೇ.75 ಮೀಸಲಾತಿ ಸಿಗುವವರೆಗೂ ಹೋರಾಟ ಮಾಡಲೇಬೇಕು, ಸರ್ಕಾರ ಮೀಸಲಾತಿಯನ್ನು ಜಾರಿಗೊಳಿಸಲೇಬೇಕು. ಇದು ಜಾರಿಯಾಗುತ್ತದೆ ಎಂಬ ನಂಬಿಕೆ, ಅಚಲವಾದ ವಿಶ್ವಾಸ ನನಗಿದೆ ಎಂದು ಹೇಳಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರಿಗೆ ಸಮಿತಿಯ ಅಧ್ಯಕ್ಷತೆ ಕೊಟ್ಟಿದ್ದರು. ಅವರ ವರದಿಯನ್ನು ಪರಿಶೀಲಿಸುವ ಅವಶ್ಯಕತೆಯಿಲ್ಲ. ಅವರು ಸಂವಿಧಾನವನ್ನು ಅಧ್ಯಯನ ಮಾಡಿದ್ದಾರೆ. ಸಂಶೋಧನೆ ಮಾಡಿದ್ದಾರೆ. ಹೀಗಾಗಿ ಅವರ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಆದರೆ ಆ ವರದಿಯನ್ನು ಜಾರಿಗೊಳಿಸುವಲ್ಲಿ ವೆಫಲ್ಯತೆ ಕಾಣುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಮೀಸಲಾತಿ ಕೊಡದಿದ್ದರೆ ಪರಿಶಿಷ್ಟ ಜಾತಿ ಸೇರಿದಂತೆ ಎಲ್ಲ ಸಮುದಾಯವರು ಹೋರಾಟ ನಡೆಸುವ ದಿನಗಳು ದೂರವುಳಿದಿಲ್ಲ. ಈ ಕೂಡಲೇ ಮೀಸಲಾತಿ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.