ಬೆಂಗಳೂರು: ಅನ್ಯ ರಾಜ್ಯದಿಂದ ಬೆಂಗಳೂರಿಗೆ ನಾಯಿ ಮಾಂಸ ಸಾಗಾಟದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ಅವರನ್ನು ಬೆಂಗಳೂರಿನ ಕಾಟನ್ ಪೇಟೆ ಠಾಣಾ ಪೊಲೀಸರು ಬಂಧಿಸಿದ್ದಾರೆ.
ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಆಮದಾಗುತ್ತಿದ್ದ ಕುರಿ ಮಾಂಸದಲ್ಲಿ ನಾಯಿ ಮಾಂಸ ಮಿಶ್ರಿತವಾಗಿದೆ ಎಂಬ ಆರೋಪ ಕೇಳಿ ಬಂದಿದೆ. ತಡರಾತ್ರಿ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ ಸುಮಾರು 50ಕ್ಕೂ ಹೆಚ್ಚು ಬಾಕ್ಸ್ಗಳಲ್ಲಿ 4,500 ಕೆಜಿ ಮಾಂಸವಿತ್ತು. ಆದರೆ, ಕುರಿಯ ಮಾಂಸದೊಂದಿಗೆ ನಾಯಿ ಮಾಂಸವನ್ನ ಮಿಶ್ರಣ ಮಾಡಲಾಗಿದೆ ಎಂದು ಆರೋಪಿಸಿದ್ದ ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಪುನೀತ್ ಕೆರೆಹಳ್ಳಿ ಮತ್ತು ಸಂಗಡಿಗರು ಬಾಕ್ಸ್ ಗಳನ್ನು ಹೊರಗೆ ತರುತ್ತಿದ್ದಂತೆ ತಡೆದಿದ್ದರು.
ಈ ವೇಳೆ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಯತ್ನಿಸಿದ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಪೊಲೀಸರ ವಶದಲ್ಲಿದ್ದಾಗ ಅಸ್ವಸ್ಥಗೊಂಡಿರುವುದರಿಂದ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.