ಶಿವಮೊಗ್ಗ (Shimoga)- ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ಪಕ್ಷ ಶೀಘ್ರವೇ ಕ್ರಮ ಕೈಗೊಳ್ಳಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯತ್ನಾಳ್ ಅವರ ಈ ರೀತಿಯ ಹೇಳಿಕೆಗಳು ಪಕ್ಷಕ್ಕೆ ಮುಜುಗರ ತಂದಿವೆ. ಹೇಳಿಕೆಯನ್ನು ರಾಜ್ಯ, ರಾಷ್ಟ್ರೀಯ ನಾಯಕರು ಗಂಭೀರವಾಗಿ ತೆಗೆದುಕೊಂಡಿದ್ದಾರೆ. ಪಕ್ಷದ ಹೈಕಮಾಂಡ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದರು.
ಮುಖ್ಯಮಂತ್ರಿ ಸ್ಥಾನಕ್ಕೆ 2,500 ಕೋಟಿ ರೂ. ನೀಡುವಂತೆ ಕೇಂದ್ರದ ನಾಯಕರೇ ಕೇಳಿದ್ದರು ಎಂದು ಯತ್ನಾಳ್ ಹೇಳಿದ್ದಾರೆ. ಅವರಿಗೆ ಈ ರೀತಿ ಒತ್ತಡ ಹಾಕಿದವರು ಯಾರು ಎಂಬುದನ್ನು ಬಹಿರಂಗಪಡಿಸಲಿ ಎಂದು ಹೇಳಿದರು.
ಸಚಿವ ಸಂಪುಟ ಸೇರುವ ಬಗ್ಗೆ ಯಾವುದೇ ಒತ್ತಡ ಹಾಕಿಲ್ಲ. ಪಕ್ಷ ಈಗಾಗಲೇ ಸೂಕ್ತ ಸ್ಥಾನ ನೀಡಿದೆ. ಹಳೆ ಮೈಸೂರು ಭಾಗಗಳಲ್ಲಿ ಬಿಜೆಪಿ ಬಲವರ್ಧನೆಗೊಂಡಿದೆ. ಸ್ವಲ್ಪ ಶ್ರಮಪಟ್ಟರೆ ಬಿಜೆಪಿಗೆ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಬಿಜೆಪಿ ಹಲವು ಸಚಿವರ ಮೇಲೆ ವಿರೋಧ ಪಕ್ಷಗಳು ವಿನಾಕಾರಣ ಕಮಿಷನ್ ಆರೋಪ ಮಾಡುತ್ತಿವೆ. ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ ಇಂತಹ ಹೇಳಿಕೆ ನೀಡುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬರುವ ಕನಸು ಕಾಣುತ್ತಿದೆ ಎಂದು ಕುಟುಕಿದರು.