ಬಂಟ್ವಾಳ(Bantwala): ಪಿಎಫ್ಐ ಸಂಘಟನೆ ಹತ್ತಿಕ್ಕಲು ದಕ್ಷ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸ್ ಇಲಾಖೆಯ ಕಾರ್ಯವೈಖರಿ ಶ್ಲಾಘನೀಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸುನಿಲ್ ಕುಮಾರ್ ಹೇಳಿದರು.
ಬಿ.ಸಿ.ರೋಡ್‌ನಲ್ಲಿ ಮಂಗಳವಾರ ನಡೆದ ಬಿಜೆಪಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಇಂತಹ ಸಮಾಜಘಾತುಕ ಶಕ್ತಿಗಳು ವಿಜೃಂಭಿಸಲು ಅವಕಾಶ ಕೊಟ್ಟಿದ್ದರು ಎಂದು ದೂರಿದರು.
ಸಮಾಜ ಘಾತುಕ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದವರ ವಿರುದ್ಧ ಕೇಂದ್ರ ಮತ್ತು ರಾಜ್ಯ ಸರ್ಕಾರ ನಿರ್ದಾಕ್ಷಿಣ್ಯ ಕ್ರಮಕೈಗೊಳ್ಳುತ್ತಿವೆ. ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ನಡೆದಿದ್ದ ಹಿಂದೂ ಕಾರ್ಯಕರ್ತರ ಹತ್ಯೆ ಮತ್ತು ಸಮಾಜ ದ್ರೋಹಿಗಳಿಗೆ ವಿಜೃಂಭಿಸಲು ಬಿಜೆಪಿ ಸರ್ಕಾರ ಅವಕಾಶ ನೀಡುವುದಿಲ್ಲ ಎಂದರು.
ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಜ್ಯ ಘಟಕದ ಅಧ್ಯಕ್ಷ ನೆ.ಲ. ನರೇಂದ್ರ ಬಾಬು, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುದರ್ಶನ್ ಮೂಡುಬಿದಿರೆ, ಮಾಜಿ ಶಾಸಕರಾದ ಎ.ರುಕ್ಮಯ ಪೂಜಾರಿ, ಕೆ. ಪದ್ಮನಾಭ ಕೊಟ್ಟಾರಿ, ಕಿಯೋನಿಕ್ಸ್ ಮಾಜಿ ಅಧ್ಯಕ್ಷ ಕೆ. ಹರಿಕೃಷ್ಣ ಬಂಟ್ವಾಳ, ಬಂಟ್ವಾಳ ಬಿಜೆಪಿ ಅಧ್ಯಕ್ಷ ದೇವಪ್ಪ ಪೂಜಾರಿ, ಜಿಲ್ಲಾ ಕಾರ್ಯದರ್ಶಿ ರಾಮದಾಸ ಬಂಟ್ವಾಳ, ಆರ್.ಸಿ. ನಾರಾಯಣ್ ಮತ್ತಿತರರು ಇದ್ದರು.