ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸದಲ್ಲಿರುವ ನಟ ದರ್ಶನ್ ಅವರಿಗೆ ಸುಪ್ರೀಂ ಕೋರ್ಟ್ನಿಂದ ದೊಡ್ಡ ಹಿನ್ನಡೆ ಎದುರಾಗಿದೆ. ಸೆಷನ್ಸ್ ಕೋರ್ಟ್ನಲ್ಲಿ ಪ್ರಕರಣದ ವಿಚಾರಣೆ ತೀವ್ರ ವಿಳಂಬವಾಗುತ್ತಿದೆ ಎಂದು ಆರೋಪಿಸಿ ನಟ ದರ್ಶನ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಿ ಮಹತ್ವದ ತೀರ್ಪು ಪ್ರಕಟಿಸಿದೆ.
ನಟ ದರ್ಶನ್ ಪರ ವಕೀಲರು, ಪ್ರಕರಣದ ವಿಚಾರಣೆ ನಿಧಾನಗತಿಯಲ್ಲಿ ಸಾಗುತ್ತಿದೆ. ವಿಚಾರಣೆ ಪೂರ್ಣಗೊಳ್ಳಲು ಹೆಚ್ಚು ಸಮಯ ಬೇಕಾಗುತ್ತಿರುವುದರಿಂದ ಜಾಮೀನು ನೀಡಬೇಕು ಎಂದು ಕೋರಿದರು. ಅಲ್ಲದೆ, ದೀರ್ಘಕಾಲ ಜೈಲಿನಲ್ಲಿ ಇರಿಸುವುದು ನ್ಯಾಯಸಮ್ಮತವಲ್ಲ ಎಂದು ವಾದ ಮಂಡಿಸಿದರು.
ಇದಕ್ಕೆ ಪ್ರತಿಯಾಗಿ ಸರ್ಕಾರದ ಪರ ವಕೀಲರು, ರೇಣುಕಾಸ್ವಾಮಿ ಕೊಲೆ ಪ್ರಕರಣ ಗಂಭೀರ ಸ್ವರೂಪದ್ದಾಗಿದ್ದು, ಸಾಕ್ಷಿಗಳ ಪರಿಶೀಲನೆ ಹಾಗೂ ನ್ಯಾಯಾಂಗ ಪ್ರಕ್ರಿಯೆ ಮುಂದುವರಿಯುತ್ತಿದೆ. ಹೀಗಾಗಿ ತಕ್ಷಣ ಜಾಮೀನು ನೀಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಎರಡೂ ಪಕ್ಷಗಳ ವಾದ – ಪ್ರತಿವಾದಗಳನ್ನು ಆಲಿಸಿದ ನ್ಯಾಯಮೂರ್ತಿ ಪರ್ದೀವಾಲಾ ಅವರಿದ್ದ ಸುಪ್ರೀಂ ಕೋರ್ಟ್ ಪೀಠ ಮಹತ್ವದ ಆದೇಶ ನೀಡಿದೆ. “ಒಂದು ವರ್ಷದ ಸಮಯಾವಕಾಶ ನೀಡಲಾಗುತ್ತಿದೆ. ಈ ಅವಧಿಯೊಳಗೆ ಪ್ರಕರಣದ ವಿಚಾರಣೆ ಪೂರ್ಣಗೊಳ್ಳದಿದ್ದರೆ ಆಗ ಆರೋಪಿತರು ಮತ್ತೆ ಜಾಮೀನು ಅರ್ಜಿ ಸಲ್ಲಿಸಬಹುದು. ಆಗ ಪರಿಸ್ಥಿತಿಯನ್ನು ಪರಿಶೀಲಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ,” ಎಂದು ಕೋರ್ಟ್ ಹೇಳಿದೆ.
ಈ ಮೂಲಕ ಸದ್ಯಕ್ಕೆ ನಟ ದರ್ಶನ್ ಅವರಿಗೆ ಜಾಮೀನು ನಿರಾಕರಿಸಲಾಗಿದೆ. ಇದರ ಪರಿಣಾಮವಾಗಿ ದರ್ಶನ್ ಇನ್ನೂ ಪರಪ್ಪನ ಅಗ್ರಹಾರ ಜೈಲಿನಲ್ಲೇ ಇರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸುಪ್ರೀಂ ಕೋರ್ಟ್ ನೀಡಿರುವ ಈ ತೀರ್ಪು ರಾಜ್ಯದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ.
















