ಮೈಸೂರು: ನಾಳೆ ಆಷಾಢ ಶುಕ್ರವಾರ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿದ್ದು ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ . ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ವ್ಯವಸ್ಥೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ತಿಳಿಸಿದರು.
ಮೈಸೂರಿನ ನೂತನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳಾದ ಡಾ.ರಾಜೇಂದ್ರ ಮತ್ತು ನಗರದ ಪೊಲೀಸ್ ಆಯುಕ್ತರಾದ ರಮೇಶ್ ಬಾನೋತ್ ಅವರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಆಷಾಢ ಮಾಸದಲ್ಲಿ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಅನೇಕ ವ್ಯವಸ್ಥೆ ಮಾಡಲಾಗಿದ್ದು, ನಗರದ ಲಲಿತಮಹಲ್ ಹೆಲಿಪ್ಯಾಡ್ ಸಮೀಪದಿಂದ ಸಾರ್ವಜನಿಕರಿಗೆ ಬಸ್ ವ್ಯವಸ್ಥೆ ಮಾಡಲಾಗಿದೆ. ಲಲಿತಾ ಮಹಲ್ ಪ್ಯಾಲೇಸ್ ನ ಹೆಲಿಪ್ಯಾಡ್ ನಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ ಮಾಡಲಾಗಿದ್ದು, ಇಲ್ಲಿಂದ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.
ಪ್ಲಾಸ್ಟಿಕ್ ಮುಕ್ತವಾದ ಆಷಾಡ ಮಾಸ ಆಚರಣೆ ಮಾಡಲು ಸಿದ್ಧತೆ ನಡೆಸಲಾಗಿದ್ದು, ಎಲ್ಲಂದರಲ್ಲಿ ಪ್ಲಾಸ್ಟಿಕ್ ಬಿಸಾಡಿದವರಿಗೆ ದಂಡ ಬೀಳಲಿದೆ. ಮೆಟ್ಟಿಲುಗಳು ಮತ್ತು ದೇವಸ್ಥಾನ ಸೇರಿದಂತೆ ಅನೇಕ ಭಾಗಗಳಲ್ಲಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ. ಚಾಮುಂಡಿ ಬೆಟ್ಟಕ್ಕೆ ಹೊರಡುವ ಸಾರ್ವಜನಿಕರ ವಾಹನಗಳಿಗೆ ಸಂಪೂರ್ಣ ನಿಷೇಧ ವಿಧಿಸಲಾಗಿದೆ. ಬಸ್ ನಲ್ಲಿ ಮಾತ್ರ ಪ್ರಯಾಣ ಮಾಡಬೇಕು ಎಂದರು.
ಪ್ರಸಾದ ಕೌಂಟರ್ ಗಳಲ್ಲಿ ಫುಡ್ ಸೇಫ್ಟಿ ಆಫೀಸರ್ಸ್ ಗಳ ತಂಡ ಇರುತ್ತದೆ. ದೊಡ್ಡ ಮಟ್ಟದಲ್ಲಿ ಪ್ರಸಾದ ವಿತರಣೆ ಮಾಡುವವರು ಫುಡ್ ಸೇಫ್ಟಿ ಆಫೀಸರ್ಸ್ ಬಳಿ ಸರ್ಟಿಫಿಕೇಟ್ ಪಡೆಯುವುದು ಕಡ್ಡಾಯವಾಗಿದೆ ಎಂದು ಅವರು ತಿಳಿಸಿದರು.