ಬೆಳಗಾವಿ: ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಬೆಳಗಾವಿಯ ದಂಡು ಮಂಡಳಿ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ನಡೆದಿದೆ.
ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿರುವ ದಂಡು ಮಂಡಳಿ ಕಚೇರಿ ಮೇಲೆ ದಾಳಿ ಮಾಡಿದ ಸಿಬಿಐ ಅಧಿಕಾರಿಗಳು ದಂಡು ಮಂಡಳಿಯ ಕೆಲವು ಅಧಿಕಾರಿಗಳನ್ನು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರು, ದೆಹಲಿ ಸಿಬಿಐ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿದ್ದು, ದಂಡು ಮಂಡಳಿಯ ವಿವಿಧ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಅಭ್ಯರ್ಥಿಯೊಬ್ಬರು ನೀಡಿದ ದೂರಿನ ಅನ್ವಯ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೇಂದ್ರದ ರಕ್ಷಣಾ ಇಲಾಖೆಯ ವ್ಯಾಪ್ತಿಗೆ ಒಳಪಡುವ ಇದು ರಾಜ್ಯದ ಏಕೈಕ ದಂಡು ಮಂಡಳಿ ಕಚೇರಿ ಆಗಿದೆ. 2021ರಲ್ಲಿ ಕ್ಲರ್ಕ್, ಸ್ಟೆನೋಗ್ರಾಫರ್ ಸೇರಿ 19 ಅಭ್ಯರ್ಥಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಎಲ್ಲಾ ವಿಚಾರಗಳ ಬಗ್ಗೆ ಸಿಬಿಐ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ.