ಹಾಸನ: ಅಪಘಾತ ಸಂಭವಿಸಿ ಒಂದು ಗಂಟೆಯಾದರೂ ಆ್ಯಂಬುಲೆನ್ಸ್ ಬಾರದ ಹಿನ್ನೆಲೆ ಯುವಕನೋರ್ವ ನಡುರಸ್ತೆಯಲ್ಲೇ ಪ್ರಾಣ ಬಿಟ್ಟ ಘಟನೆ ಹಾಸನದ ಬೇಲೂರು ರಸ್ತೆಯ ಕಲ್ಕೆರೆ ಗ್ರಾಮದ ಬಳಿ ನಡೆದಿದೆ.
ಬೇಲೂರು ತಾಲೂಕಿನ ಇಬ್ಬೀಡು ಗ್ರಾಮದ ನಿವಾಸಿ ಆನಂದ್ (30) ಮೃತಪಟ್ಟ ಯುವಕ.
ಆನಂದ್ ಬೇಲೂರು ಕಡೆಯಿಂದ ಹಾಸನದ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವಾಹನ ಹಿಂಬದಿಯಿಂದ ಬೈಕ್ ಡಿಕ್ಕಿ ಹೊಡೆದಿದೆ.
ಕೂಡಲೇ ಸ್ಥಳೀಯರು ಆ್ಯಂಬುಲೆನ್ಸ್ ಗೆ ಕರೆ ಮಾಡಿದ್ದಾರೆ. ಆದರೆ ಅಪಘಾತವಾಗಿ ಒಂದು ಗಂಟೆಯಾದರೂ ಸ್ಥಳಕ್ಕೆ ಆಂಬುಲೆನ್ಸ್ ಬಂದಿಲ್ಲ. ತೀವ್ರ ರಕ್ತಸ್ರಾವವಾಗಿ ಸಕಾಲಕ್ಕೆ ಆಂಬುಲೆನ್ಸ್ ಸಿಗದೆ ಆನಂದ್ ನಡುರಸ್ತೆಯಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ.
ಈ ಕುರಿತು ಹಾಸನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.















