ಮೈಸೂರು (Mysuru)-ಸ್ವಾತಂತ್ರ್ಯ ಬಂದು 75 ವರ್ಷಗಳು ತುಂಬುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ 75 ಸ್ಥಳಗಳಲ್ಲಿ ‘ಅಮೃತ ಭಾರತಿಗೆ ಕನ್ನಡದ ಆರತಿ’ ಎಂಬ ವಿಶೇಷ ಕಾರ್ಯಕ್ರಮವನ್ನು 2022 ರ ಮೇ 28 ರಂದು ರಾಜ್ಯದಾದ್ಯಂತ ಏಕಕಾಲಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ಡಾ. ಬಗಾದಿ ಗೌತಮ್ ಅವರು ತಿಳಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮೈಸೂರು ಜಿಲ್ಲೆಯಲ್ಲಿ ಸ್ವಾತಂತ್ರ‍್ಯ ಚಳವಳಿಯ ಇತಿಹಾಸವನ್ನು ಹೊಂದಿರುವ ಐತಿಹಾಸಿಕ ಸ್ಥಳಗಳಾದ ರಾಮಸ್ವಾಮಿ ವೃತ್ತ, ಸುಬ್ಬರಾಯನ ಕೆರೆ, ನಂಜನಗೂಡು ತಾಲ್ಲೂಕಿನ ಬದನವಾಳು ಮತ್ತು ತಗಡೂರು ಸ್ಥಳಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದ ಪ್ರಮುಖ ಉದ್ದೇಶ ದೇಶದ ಸ್ವಾತಂತ್ರ‍್ಯ ಚಳವಳಿಗೆ ಕರ್ನಾಟಕದ ಕೊಡುಗೆಯನ್ನು ಸ್ಮರಿಸುವುದೇ ಆಗಿದೆ ಎಂದು ತಿಳಿಸಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚೆನ್ನಪ್ಪ ಅವರು ಮಾತನಾಡಿ, ಇದೊಂದು ವಿಶೇಷ ಕಾರ್ಯಕ್ರಮ. ಕಾರ್ಯಕ್ರಮದ ಆಯೋಜನೆಗೆ 4 ಸ್ಥಳಗಳಿಗೆ ಸಂಬಂಧಿಸಿದಂತೆ 4 ಉಪಸಮಿತಿಗಳನ್ನು ರಚಿಸಲಾಗುವುದು. ರಾಮಸ್ವಾಮಿ ವೃತ್ತ ಹಾಗೂ ಸುಬ್ಬರಾಯನ ಕೆರೆ ಮೈದಾನದ ಕಾರ್ಯಕ್ರಮಕ್ಕೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ, ಬದನವಾಳು ಸ್ಥಳದ ಕಾರ್ಯಕ್ರಮಕ್ಕೆ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ, ತಗಡೂರು ಸ್ಥಳದ ಕಾರ್ಯಕ್ರಮಕ್ಕೆ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಉಪ ಸಮಿತಿಗಳನ್ನು ರಚಿಸಿ ಪ್ರತ್ಯೇಕ ಸಭೆ ನಡೆಸಿ ಕಾರ್ಯಕ್ರಮದ ರೂಪುರೇಷೆಗಳನ್ನು ತಯಾರಿಸಲಾಗುವುದು. 4 ಸ್ಥಳಗಳಲ್ಲಿಯೂ ಸ್ವಾತಂತ್ರ ಹೋರಾಟದಲ್ಲಿ ಸ್ಥಳದ ವಿಶೇಷತೆ ಕುರಿತು ಶಿಲಾಫಲಕಗಳನ್ನು ಸ್ಥಾಪಿಸಲಾಗುವುದು ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಲಕ್ಷ್ಮಿಕಾಂತ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್.ಮಲ್ಲಿಕಾರ್ಜುನಸ್ವಾಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕರಾದ ಟಿ.ಕೆ.ಹರೀಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಸಂಘ ಸಂಸ್ಥೆಗಳ ಮುಖಂಡರು ಉಪಸ್ಥಿತರಿದ್ದರು.