ಆಂಧ್ರಪ್ರದೇಶ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಅವರ ವೈಎಸ್ ಆರ್ ಕಾಂಗ್ರೆಸ್ ನ ನಾಯಕನೊಬ್ಬನನ್ನು ಯುವಕ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿರುವ ಘಟನೆ ಪಲ್ನಾಡು ಜಿಲ್ಲೆಯಲ್ಲಿ ನಡೆದಿದೆ.
ಯುವಕನೊಬ್ಬ ಮಚ್ಚಿನಿಂದ ಹಲ್ಲೆ ನಡೆಸುತ್ತಿರುವ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತ ವ್ಯಕ್ತಿಯನ್ನು ರಶೀದ್ ಎಂದು ಗುರುತಿಸಲಾಗಿದೆ. ರಸ್ತೆಯಲ್ಲಿ ರಕ್ತದೋಕುಳಿಯೇ ಹರಿದಿದೆ, ಎರಡೂ ಕೈಗಳು ತುಂಡಾಗಿದ್ದು, ಕುತ್ತಿಗೆಗೆ ಆಳವಾದ ಗಾಯವಾಗಿದೆ ಎಂದು ಮೂಲಗಳು ತಿಳಿಸಿವೆ.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಪಲ್ನಾಡು ಜಿಲ್ಲಾ ಪೊಲೀಸ್ ಮುಖ್ಯಸ್ಥ ಕಂಚಿ ಶ್ರೀನಿವಾಸ ರಾವ್ ಇಂಡಿಯಾ ಟುಡೇ ಜತೆ ಮಾತನಾಡಿದ್ದು, ವೈಯಕ್ತಿಕ ದ್ವೇಷವೇ ಈ ಭೀಕರ ಹತ್ಯೆಯ ಹಿಂದಿನ ಉದ್ದೇಶ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದರು.
ಈ ಘಟನೆಯಲ್ಲಿ ಯಾವುದೇ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ, ಆದರೆ ಜನರು ಈ ಪ್ರಕರಣವನ್ನು ಉದಾಹರಣೆಯಾಗಿ ತೆಗೆದುಕೊಳ್ಳಬೇಕು ಮತ್ತು ರಾಜ್ಯದಲ್ಲಿ ಇಂತಹ ಹಿಂಸಾಚಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ಅವರು ಹೇಳಿದರು.
ಈ ಪ್ರದೇಶದಲ್ಲಿ ಹೆಚ್ಚು ಜನ ಒಂದೆಡೆ ಸೇರದಂತೆ ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ. ಉದ್ವಿಗ್ನತೆಯನ್ನು ಉಂಟುಮಾಡುವ ಅಥವಾ ಪ್ರದೇಶದ ಶಾಂತಿ ಕದಡಲು ಪ್ರಯತ್ನಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು ಪ್ರಕರಣದ ಹೆಚ್ಚಿನ ತನಿಖೆ ನಡೆಯುತ್ತಿದೆ.