ಬೆಂಗಳೂರು: ಮೇಕೆದಾಟು ಆಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಕು ಎಂದು ನಾನು ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಮನವಿ ಮಾಡುತ್ತೇನೆ ಎಂದು ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಈ ಬಗ್ಗೆ ಅವರು ಮಾತನಾಡಿರುವ ವಿಡಿಯೊವನ್ನು ಎಎನ್‌ಐ ಸುದ್ದಿ ಸಂಸ್ಥೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.
ಬೆಂಗಳೂರಿನಲ್ಲಿ ತಲೆದೂರಿರುವ ನೀರಿನ ಸಮಸ್ಯೆ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನೀರಿನ ಯಾವುದೇ ಸಮಸ್ಯೆ ಇಲ್ಲ. ನಾವು ಪರ್ಯಾಯ ವ್ಯವಸ್ಥೆ ಮಾಡಿದ್ದೇವೆ. ತಮಿಳುನಾಡಿಗೆ ನೀರು ಬಿಡಲಾಗುತ್ತಿದೆ ಎಂದು ಬಿಜೆಪಿ ಆರೋಪಿಸುತ್ತಿರುವುದು ಸುಳ್ಳು ಎಂದು ಹೇಳಿದರು.
ನಾಮಫಲಕಗಳಲ್ಲಿ ಶೇ 60ರಷ್ಟು ಕನ್ನಡ ಕಡ್ಡಾಯದ ಬಗ್ಗೆ ಮಾತನಾಡಿದ ಅವರು, ನಾಮಫಲಕಗಳಲ್ಲಿ 60:40 ನಿಯಮ ಕಡ್ಡಾಯ. ಕನ್ನಡಪರ ಸಂಘಟನೆಗಳು ಕಾನೂನು ಕೈಗೆತ್ತಿಕೊಳ್ಳಬಾರದು ಎಂದು ಹೇಳಿದರು.