ಬೆಂಗಳೂರು(Bengaluru): ಶಿವಾಜಿನಗರದಲ್ಲಿರುವ ಸರ್ಕಾರಿ ಸ್ವಾಮ್ಯದ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ 33 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರೀಯ ಸಂಸ್ಥೆಯಿಂದ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಗೆ ಪ್ರತಿಕ್ರಿಯೆಯಾಗಿ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರ ಮತ್ತು ಇತರ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿದೆ.
ಮುಂದಿನ ಆದೇಶದವರೆಗೆ ಸಂಸ್ಥೆಯಲ್ಲಿ ಡಾ ಎಂ ಮೀನಾಕ್ಷಿ ಪಾರ್ಥಸಾರಥಿ ಅವರ ಸೇವೆಯನ್ನು ಮುಂದುವರಿಸಲು ನ್ಯಾಯಮೂರ್ತಿ ಎಸ್ ಸುನೀಲ್ ದತ್ ಯಾದವ್ ಅವರ ರಜಾಕಾಲದ ಪೀಠವು ಮಧ್ಯಂತರ ಆದೇಶವನ್ನು ನೀಡಿದೆ.
ಈ ಹಿಂದೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಡಾ ಮೀನಾಕ್ಷಿ ಅವರನ್ನು ಮಾರ್ಚ್ 8, 2019 ರ ಆದೇಶದ ಮೂಲಕ ಅಟಲ್ ಬಿಹಾರಿ ಸಂಸ್ಥೆಗೆ ಶಾಶ್ವತವಾಗಿ ವರ್ಗಾಯಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿತ್ತು.
ಆದಾಗ್ಯೂ, ಮೇ 8,2019ರಂದು ಹೊರಡಿಸಿದ್ದ ಆದೇಶವನ್ನು ಹಿಂತೆಗೆದುಕೊಳ್ಳುವುದಾಗಿ ರಾಜ್ಯ ಸರ್ಕಾರ ಮೇ 4 ಮತ್ತು 5 ರಂದು ಆದೇಶ ಹೊರಡಿಸಿತ್ತು. ಇದರಿಂದಾಗಿ ಅರ್ಜಿದಾರರು ದಿಗ್ಬ್ರಮೆ ವ್ಯಕ್ತಪಡಿಸಿದ್ದರು.