ಮನೆ ರಾಜಕೀಯ 31 ವರ್ಷದ ಹಿಂದಿನ ಗಲಭೆ ಪ್ರಕರಣದ ಆರೋಪಿ ಬಂಧನ: ಬಿಜೆಪಿಯಿಂದ ಪ್ರತಿಭಟನೆ

31 ವರ್ಷದ ಹಿಂದಿನ ಗಲಭೆ ಪ್ರಕರಣದ ಆರೋಪಿ ಬಂಧನ: ಬಿಜೆಪಿಯಿಂದ ಪ್ರತಿಭಟನೆ

0

ಬೆಂಗಳೂರು: 1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಹಿಂದೂ ಕಾರ್ಯಕರ್ತನ ಬಂಧನವನ್ನು ಖಂಡಿಸಿ ಕರ್ನಾಟಕ ಬಿಜೆಪಿ ಬುಧವಾರ ರಾಜ್ಯದ ಹಲವು ಭಾಗಗಳಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

1992ರಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ನಡೆದ ಆಂದೋಲನದ ವೇಳೆ ಉಂಟಾದ ಗಲಭೆಗೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಪ್ರಕರಣಗಳನ್ನು ವಿಲೇವಾರಿ ಮಾಡುವಾಗ ಹುಬ್ಬಳ್ಳಿ-ಧಾರವಾಡ ಪೊಲೀಸರು ನಾಲ್ಕು ದಿನಗಳ ಹಿಂದೆ ಶ್ರೀಕಾಂತ್ ಪೂಜಾರಿ (51) ಅವರನ್ನು ಬಂಧಿಸಿದ್ದರು. ಬಂಧಿತ ಪೂಜಾರಿ 31 ವರ್ಷಗಳ ಹಿಂದೆ ಆಂದೋಲನದಲ್ಲಿ ಪಾಲ್ಗೊಂಡಿದ್ದರು. ಈ ವಿಚಾರ ರಾಜ್ಯದಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮಾತಿನ ಚಕಮಕಿಗೆ ಕಾರಣವಾಗಿದೆ.

ಇದರ ನಡುವೆಯೇ ಇತ್ತೀಚೆಗಷ್ಟೇ ಕರ್ನಾಟಕದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬಾಕಿ ಉಳಿದಿರುವ ಪ್ರಕರಣಗಳನ್ನು ಮುಂದುವರಿಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಈ ಸಂಬಂಧ 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಪೊಲೀಸರು ಪೂಜಾರಿಯನ್ನು ಬಂಧಿಸಿದ್ದರು.

ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪದೇ ಪದೇ ಹಿಂದೂಗಳ ಭಾವನೆಗಳಿಗೆ ಧಕ್ಕೆ ತರುತ್ತಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಂಗಳವಾರ ಪ್ರತಿಭಟನೆಗೆ ಕರೆ ನೀಡಿದ್ದರು. ಬಂಧನವನ್ನು ಖಂಡಿಸಿದ ವಿಜಯೇಂದ್ರ, ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮ ಮಂದಿರದ ಶಂಕುಸ್ಥಾಪನೆಗೆ ಕೆಲವೇ ದಿನಗಳ ಮೊದಲು 31 ವರ್ಷಗಳ ಹಿಂದಿನ ಪ್ರಕರಣವನ್ನು ಪುನಃ ತೆರೆಯುವುದರ ಹಿಂದಿನ ರಾಜ್ಯ ಸರ್ಕಾರದ ಉದ್ದೇಶವನ್ನು ಇದು ಸ್ಪಷ್ಟವಾಗಿ ತೋರಿಸುತ್ತದೆ. ಕರ್ನಾಟಕ ಮತ್ತು ದೇಶದ ಜನರ ಮುಂದೆ ಬಿಜೆಪಿ ಕಾಂಗ್ರೆಸ್ ಸರ್ಕಾರವನ್ನು ಬಯಲಿಗೆಳೆಯಲಿದೆ ಎಂದರು.

ಹುಬ್ಬಳ್ಳಿಯಲ್ಲಿ ಬಿಜೆಪಿ ವತಿಯಿಂದ ಶ್ರೀಕಾಂತ್ ಪೂಜಾರಿ ಅವರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿ ಬಿಜೆಪಿ ಪಕ್ಷದ ಬಾವುಟ, ಪೋಸ್ಟರ್, ಬ್ಯಾನರ್ ಹಿಡಿದು ಮೆರವಣಿಗೆ ನಡೆಸಿದರು. ಬೆಂಗಳೂರಿನಲ್ಲಿ ಪಕ್ಷದ ಮುಖಂಡರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಿದರು. ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಸಂಸದರು, ಮಾಜಿ ಸಚಿವರಾದ ಡಾ.ಸಿ.ಎನ್.ಅಶ್ವಥ್ ನಾರಾಯಣ್, ಬೈರತಿ ಬಸವರಾಜ್, ಕೆ.ಗೋಪಾಲಯ್ಯ, ಸಂಸದ ಪಿ.ಸಿ.ಮೋಹನ್ ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.