ಮನೆ ರಾಜ್ಯ ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ , ಸಿಎಂ ಶ್ಲಾಘನೆ

ಶಂಕಿತ ಉಗ್ರರ ಬಂಧನ: ಸಿಸಿಬಿ ಪೊಲೀಸರ ಕಾರ್ಯಕ್ಕೆ ಗೃಹ ಸಚಿವ , ಸಿಎಂ ಶ್ಲಾಘನೆ

0

ಬೆಂಗಳೂರು: ಬೆಂಗಳೂರಿನಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಸಿಸಿಬಿ ಪೊಲೀಸರ ಕಾರ್ಯವನ್ನು ಗೃಹ ಸಚಿವ ಡಾ.‌ಜಿ ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Join Our Whatsapp Group

ಉಗ್ರ ಬಂಧನ ಹಾಗೂ ಕಾರ್ಯಾಚರಣೆ ಕುರಿತು ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, ಐವರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದೆ. ಬಂಧಿತರು ಈ ಹಿಂದೆ ಹಲವು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದರು. ನಂತರ ಜಾಮೀನು ಮೇಲೆ ಹೊರಗೆ ಬಂದಿದ್ದರು. ನಂತರ ದೇಶದ್ರೋಹಿ ಸಂಘಟನೆಗಳ‌ ಸಂಪರ್ಕಕ್ಕೆ ಬಂದಿದ್ದಾರೆಂದು ಹೇಳಿದರು.

ಬಂಧಿತರು ಕರ್ನಾಟಕ ಹಾಗೂ ಇತರೆಡೆಗಳಲ್ಲಿ ಉಗ್ರ ಚಟುವಟಿಕೆಗಳನ್ನು ಕೈಗೊಳ್ಳಲು ಮುಂದಾಗಿದ್ದರು. ಶಂಕಿತರ ಸಂಭವನೀಯ ಉಗ್ರ ಚಟುವಟಿಕೆಗಳನ್ನು ಸಿಸಿಬಿ ಪೊಲೀಸರು ತಡೆದು ಬಂಧಿಸಿದ್ದಾರೆ. ಈ ಶಂಕಿತರು ಯಾವ ಉಗ್ರ ಚಟುವಟಿಕೆಗೆ ಉದ್ದೇಶಿಸಿದ್ದರು ಎಂಬುದು ತನಿಖೆಯಿಂದ ಗೊತ್ತಾಗಬೇಕಿದೆ ಎಂದು ತಿಳಿಸಿದರು.

ಈ ನಡುವೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಬೆಂಗಳೂರಿನಲ್ಲಿ ವಿದ್ವಂಸಕ ಕೃತ್ಯವೆಸಗಲು ಸಂಚು ರೂಪಿಸಿದ್ದ ಐವರು ಶಂಕಿತ ಉಗ್ರರನ್ನು ಬಂಧಿಸುವ ಮೂಲಕ‌ ಸಂಭವಿಸಬಹುದಾಗಿದ್ದ ಭಾರೀ ಅನಾಹುತವನ್ನು ವಿಫಲಗೊಳಿಸಿರುವ ರಾಜ್ಯದ ಸಿಸಿಬಿ ಪೊಲೀಸರಿಗೆ ಅಭಿನಂದನೆಗಳು ಎಂದು ಹೇಳಿದ್ದಾರೆ.

ಭಯೋತ್ಪಾದಕ ಚಟುವಟಿಕೆಗಳು ಸೇರಿದಂತೆ ಯಾವುದೇ ತೆರನಾದ ದೇಶವಿರೋಧಿ ಚಟುವಟಿಗಳಲ್ಲಿ ತೊಡಗಿರುವವರನ್ನು ಪತ್ತೆಹಚ್ಚಿ, ಬೇರು ಸಮೇತ ಅಂತಹ ಶಕ್ತಿಗಳನ್ನು ರಾಜ್ಯದಿಂದ ಕಿತ್ತೊಗೆಯಲು ನಾವು ಸದಾ ಸಿದ್ಧರಿದ್ದೇವೆ. ನಾಡಿನ ಪ್ರತಿಯೊಬ್ಬರೂ ಸುರಕ್ಷತೆಯ ಬದುಕು ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ.