ಶಿವಮೊಗ್ಗ(Shivamogga): ಸಾಗರ ಪಟ್ಟಣದ ಬಜರಂಗದಳ ಸಹ ಸಂಚಾಲಕನ ಮೇಲೆ ಹಲ್ಲೆಗೆ ಯತ್ನಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿದ ಎಸ್ಪಿ ಮಿಥುನ್ ಕುಮಾರ್, ಸಮೀರ್(ಎ1), ಇಮಿಯಾನ್ ಹಾಗೂ ಮನ್ಸೂರ್ ಎಂಬುವವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಲಾಗುತ್ತಿದೆ. ಹಲ್ಲೆ ಪ್ರಕರಣದ ಎ1 ಆರೋಪಿ ಸಮೀರ್ ಎಂಬಾತನ ತಂಗಿಯನ್ನು ಸುನೀಲ್ ನಾಲ್ಕೈದು ತಿಂಗಳಿನಿಂದ ಚುಡಾಯಿಸುತ್ತಿದ್ದ. ಈ ಹಿನ್ನೆಲೆಯಲ್ಲಿ ಹಲ್ಲೆ ಮಾಡಿರುವುದಾಗಿ ತನಿಖೆ ವೇಳೆ ಸಮೀರ್ ಬಾಯ್ಬಿಟ್ಟಿದ್ದಾನೆ ಎಂದು ತಿಳಿಸಿದರು.
ತಂಗಿಯನ್ನು ಚುಡಾಯಿಸುತ್ತಿರುವ ಬಗ್ಗೆ ಸುನೀಲ್’ಗೆ ಸಮೀರ್ ಎಚ್ಚರಿಕೆ ನೀಡಿದ್ದ. ಅಲ್ಲದೇ ತಂಗಿಯ ನಂಬರ್ ಕೊಡು ಅಂತ ಸಮೀರ್’ಗೆ ಸುನೀಲ್ ಕೇಳಿದ್ದನಂತೆ. ಹಲವು ಬಾರಿ ಎಚ್ಚರಿಕೆ ನೀಡಿದರೂ ಚುಡಾಯಿಸುವುದನ್ನು ನಿಲ್ಲಿಸಿರಲಿಲ್ಲ. ಅದರಂತೆಯೇ ಸೋಮವಾರ ಬೈಕ್’ನಲ್ಲಿ ಬರುತ್ತಿದ್ದ ಸಮೀರ್’ನನ್ನು ಸುನೀಲ್ ರೇಗಿಸಿದ್ದ. ಇದರಿಂದ ಕೋಪಗೊಂಡ ಸಮೀರ್ ತನ್ನ ಬೈಕಿನಲ್ಲಿದ್ದ ಮಚ್ಚು ತೆಗೆದುಕೊಂಡು ಹಲ್ಲೆಗೆ ಯತ್ನಿಸಿರುವುದಾಗಿ ತನಿಖೆ ವೇಳೆ ಹೇಳಿದ್ದಾನೆ ಎಂದರು.
ಸಮೀರ್ ಒಬ್ಬ ಕುರಿಗಾಹಿ ಯುವಕನಾಗಿದ್ದು, ಎಂದಿನಂತೆ ಕುರಿಗಳಿಗೆ ಸೊಪ್ಪು ತರಲು ಬೈಕಿನಲ್ಲಿ ಕತ್ತಿಯನ್ನು ಇಟ್ಟುಕೊಂಡಿದ್ದ. ಅದರಿಂದಲೇ ಹಲ್ಲೆಗೆ ಮುಂದಾಗಿದ್ದಾನೆ ಎಂದು ತಿಳಿಸಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮೀರ್ ಸ್ನೇಹಿತರಾದ ಇಮಾಯಿನ್ ಮತ್ತು ಮನ್ಸೂರ್ ಅನ್ನು ವಶಕ್ಕೆ ಪಡೆಯಲಾಗಿದ್ದು, ಪ್ರಕರಣದಲ್ಲಿ ಇವರ ಪಾತ್ರ ಏನೆಂಬುದರ ಬಗ್ಗೆ ತನಿಖೆ ನಡೆಸುತ್ತಿದ್ದೇವೆ. ಹೆಚ್ಚಿನ ಮಾಹಿತಿ ವಿಚಾರಣೆ ಬಳಿಕವಷ್ಟೇ ತಿಳಿಯಲಿದೆ ಎಂದು ತಿಳಿಸಿದರು.