ಬೆಂಗಳೂರು (Bengaluru):ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಮುಸ್ಲಿಂರು ಶ್ರದ್ಧಾ ಹಾಗೂ ಭಕ್ತಿಯಿಂದ ಆಚರಿಸುತ್ತಿದ್ದಾರೆ.
ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಚಾಮರಾಜಪೇಟೆಯ ಈದ್ಗಾ ಮೈದಾನಕ್ಕೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಹಬ್ಬದ ಶುಭ ಕೋರಿದರು. ಈ ವೇಳೆ ತಲೆಗೆ ಟೋಪಿ ಧರಿಸಿದ್ದ ಸಿದ್ದರಾಮಯ್ಯ ಅವರು ಅಲ್ಲಾನನ್ನು ಸ್ಮರಿಸಿದರು.
ಪ್ರಾರ್ಥನೆ ಸಲ್ಲಿಸಿ ಮಾತನಾಡಿದ ಅವರು, ಎಲ್ಲರೂ ಪ್ರೀತಿ, ವಿಶ್ವಾಸದಿಂದ ಇರಬೇಕು. ಎಲ್ಲರೂ ಅಲ್ಲಾನಲ್ಲಿ ಪ್ರಾರ್ಥನೆ ಮಾಡಬೇಕು. ನಾನೂ ಕೂಡ ದೇಶದಲ್ಲಿ ಶಾಂತಿ ಕಾಪಾಡುವಂತೆ ಪ್ರಾರ್ಥನೆ ಮಾಡಿದ್ದೇನೆ ಎಂದರು.
ಪ್ರಾರ್ಥನೆ ಸಲ್ಲಿಸಿದ ಬಳಿಕ ಸಿದ್ದರಾಮಯ್ಯ ಅವರು ಚಾಮರಾಜಪೇಟೆ ಮಲೆ ಮಹದೇಶ್ವರ ದೇಗುಲಕ್ಕೆ ಭೇಟಿ ನೀಡಿ, ಮಲೆಮಹದೇಶ್ವರನಿಗೆ ಪೂಜೆ ಸಲ್ಲಿಸಿದರು. ಸಿದ್ದರಾಮಯ್ಯ ಅವರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ಸಾಥ್ ನೀಡಿದರು. ಪುರೋಹಿತರು ಸಿದ್ದು, ಜಮೀರ್ ಹಣೆಗೆ ಕೇಸರಿ ಬೊಟ್ಟು ಹಚ್ಚಿದರು.