ಬೆಂಗಳೂರು(Bengaluru): ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ.
ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳು, ರಾಜಕೀಯ ಮುಖಂಡರುಗಳು, ಮಠಾದೀಶರು ತಮ್ಮ ಅಥವಾ ತಮ್ಮ ಮಕ್ಕಳ ಜನ್ಮ ದಿನವನ್ನು ಕೇಕ್ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಅದ್ದೂರಿಯಾಗಿ ಆಚರಿಸುತ್ತಿರುವುದು ಗಮನಕ್ಕೆ ಬಂದಿದೆ. ಇದರಿಂದಾಗಿ ಪಾಲನಾ ಸಂಸ್ಥೆಯ ಮಕ್ಕಳಿಗೆ ಅವರ ಹುಟ್ಟು ಹಬ್ಬ ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗದೇ ಇರುವುದರಿಂದ ಮಕ್ಕಳ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರಲಿದೆ ಎಂಬ ಕಾರಣಕ್ಕಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಕಾನೂನು ಸಂಘರ್ಷಕ್ಕೆ ಒಳಗಾದ ಮಕ್ಕಳು, ಬಾಲ ಕಾರ್ಮಿಕ ಪದ್ಧತಿಯಿಂದ ರಕ್ಷಿಸಲ್ಪಟ್ಟ, ಬಾಲ್ಯ ವಿವಾಹಕ್ಕೆ ಒಳಗಾದ, ಅತ್ಯಾಚಾರಕ್ಕೆ ಒಳಗಾದ, ತಂದೆ–ತಾಯಿಯಿಂದ ತಿರಸ್ಕರಿಸಲ್ಪಟ್ಟ, ತಾಯಿ ಅಥವಾ ತಂದೆ ಇಲ್ಲದ, ಭಿಕ್ಷಾಟನೆಯಿಂದ ರಕ್ಷಿಸಲ್ಪಟ್ಟ ಇತ್ಯಾದಿ ಪಾಲನೆ ಮತ್ತು ರಕ್ಷಣೆಯ ಅವಶ್ಯವಿರುವ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ/ಬಾಲನ್ಯಾಯ ಮಂಡಳಿಗಳ ಆದೇಶದ ಮೂಲಕ ಮಕ್ಕಳ ಪಾಲನಾ ಸಂಸ್ಥೆಗಳಿಗೆ ದಾಖಲು ಮಾಡಲಾಗಿರುತ್ತದೆ. ಈ ಎಲ್ಲಾ ವರ್ಗದ ಮಕ್ಕಳು ಸಮಾಜದಿಂದ ವಂಚಿತರಾಗಿ ಮನನೊಂದವರಾಗಿರುವುದರಿಂದ ಮಕ್ಕಳ ಪಾಲನಾ ಸಂಸ್ಥೆಯಲ್ಲಿ ದಾಖಲಾಗಿರುವ ಮಕ್ಕಳ ಮನಸ್ಸಿಗೆ ಖುಷಿ ತರುವಂತಹ ಸೃಜನಶೀಲತೆಯ ಕಾರ್ಯಕ್ರಮಗಳನ್ನು ಏರ್ಪಡಿಸಿ ಮಕ್ಕಳ ಮನಸ್ಸು ಸಧೃಡ ಹಾಗೂ ಆಹ್ಲಾದಕರವಾಗುವಂತೆ ಪ್ರೋತ್ಸಾಹಿಸಬೇಕಾಗುತ್ತದೆ.
ಆದರೆ ಅದ್ದೂರಿ ಕಾರ್ಯಕ್ರಮಗಳಿಂದ ಮಕ್ಕಳ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಇಂತಹ ಆಚರಣೆಗಳು ಸದರಿ ಮಕ್ಕಳ ಆತ್ಮಾಭಿಮಾನ, ಆತ್ಮಗೌರವಕ್ಕೆ ಧಕ್ಕೆಯನ್ನುಂಟು ಮಾಡುತ್ತವೆ.
ಸದರಿ ಮಕ್ಕಳು ಕುಟುಂಬದಲ್ಲಿ ಬೆಳೆಯುವ ಬೇರೆ ಯಾವುದೇ ಮಗುವಿಗಿಂತ ಕಡಿಮೆ ಇಲ್ಲ ಎಂಬ ಭಾವನೆಯನ್ನು ಕಾಪಾಡುವ ಸಲುವಾಗಿ ಈ ಮಕ್ಕಳ ಹುಟ್ಟು ಹಬ್ಬ ಹಾಗೂ ಸರ್ಕಾರದ ಆದೇಶದ ಮೂಲಕ ನಿಗದಿಪಡಿಸಿದ ವ್ಯಕ್ತಿಗಳ ಹುಟ್ಟುಹಬ್ಬ ಆಚರಣೆಯನ್ನು ಹೊರತು ಪಡಿಸಿ, ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಬೇರೆ ಯಾರ ಹುಟ್ಟುಹಬ್ಬ ಆಚರಿಸುವುದನ್ನು ಈ ಮೂಲಕ ನಿಷೇಧಿಸಿದೆ.