ನವದೆಹಲಿ (New Delhi )- ಗೋಧಿ ಬೆಲೆ ಏರಿಕೆಯನ್ನು ನಿಯಂತ್ರಿಸಲು ರಫ್ತಿನ ಮೇಲೆ ನಿರ್ಬಂಧಗಳನ್ನು ವಿಧಿಸಲಾಗಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.
ಜಂಟಿ ಸುದ್ದಿಗೋಷ್ಠಿ ನಡೆಸಿದ ಕೇಂದ್ರ ಆಹಾರ ಕಾರ್ಯದರ್ಶಿ ಸುಧಾಂಶು ಪಾಂಡೆ, ವಾಣಿಜ್ಯ ಕಾರ್ಯದರ್ಶಿ ಬಿವಿಆರ್ ಸುಬ್ರಮಣ್ಯಂ ಮತ್ತು ಕೃಷಿ ಕಾರ್ಯದರ್ಶಿ ಮನೋಜ್ ಅಹುಜಾ ಈ ವಿಚಾರವನ್ನು ತಿಳಿಸಿದ್ದಾರೆ.
ದೇಶದಲ್ಲಿ ಗೋಧಿ ಸಾಕಷ್ಟು ಲಭ್ಯವಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಗೋಧಿ ಬೆಲೆ ಹೆಚ್ಚಾಗುತ್ತಿದ್ದು, ಇದರಿಂದ ದೇಶದಲ್ಲೂ ಅದರ ಬೆಲೆ ಹೆಚ್ಚುತ್ತಿದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದಾಗಿ ಅದರ ರಫ್ತು ನಿಷೇಧಿಸಲು ಸರ್ಕಾರ ನಿರ್ಧರಿಸಿದೆ ಎಂದು ಹೇಳಿದ್ದಾರೆ.
ಗೋಧಿ ಬೆಲೆಯು ದೇಶೀಯ ಮಾರುಕಟ್ಟೆಯಲ್ಲಿ ಕನಿಷ್ಠ ಬೆಂಬಲ ಬೆಲೆ(ಎಂಎಸ್ಪಿ) ಗಿಂತ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಈ ಹಿರಿಯ ಅಧಿಕಾರಿಗಳು ತಿಳಿಸಿದರು. ನೆರೆಯ ಹಾಗೂ ಆಹಾರ ಬಿಕ್ಕಟ್ಟನ್ನು ಎದುರಿಸುತ್ತಿರುವ ರಾಷ್ಟ್ರಗಳಿಂದ ಈಗಾಗಲೇ ಇರುವ ಹಳೆಯ ರಫ್ತು ಆದೇಶಗಳನ್ನು ಪೂರೈಸುವ ಕಾರ್ಯ ಮುಂದುವರಿಯುತ್ತದೆ ಎಂದು ಅವರು ಹೇಳಿದ್ದಾರೆ.