ಮನೆ ರಾಜ್ಯ ಬೆಂಗಳೂರು- ಶಿವಮೊಗ್ಗ ನಾಗರಿಕ ವಿಮಾನಯಾನ ಸೇವೆ ಆರಂಭ

ಬೆಂಗಳೂರು- ಶಿವಮೊಗ್ಗ ನಾಗರಿಕ ವಿಮಾನಯಾನ ಸೇವೆ ಆರಂಭ

0

ಶಿವಮೊಗ್ಗ: ಬೆಂಗಳೂರಿನಿಂದ ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಗುರುವಾರದಿಂದ ನಾಗರಿಕ ವಿಮಾನಯಾನ ಸೇವೆ ಆರಂಭಗೊಂಡಿದ್ದು, ಬೆಂಗಳೂರಿನಿಂದ ಇಂಡಿಗೋ ವಿಮಾನ ಬೆಳಗ್ಗೆ 9.50ಕ್ಕೆ ಮೊದಲ ಪ್ರಯಾಣ ಆರಂಭಿಸಿತು.

ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಎಂ.ಬಿ.ಪಾಟೀಲ್, ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ವಿಜಯೇಂದ್ರ, ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಭಾರತಿ ಶೆಟ್ಟಿ ಸೇರಿ ಹಲವರು ಪ್ರಯಾಣ ಬೆಳೆಸಿದರು.

11.05ಕ್ಕೆ ಶಿವಮೊಗ್ಗ ನಿಲ್ದಾಣ ತಲುಪಲಿದ್ದು 11.25 ಮತ್ತೆ ಬೆಂಗಳೂರಿಗೆ ತೆರಳಲಿದೆ.

ಇದು ರಾಜ್ಯದ ಮಲೆನಾಡು ಭಾಗದಲ್ಲಿ ನಿರ್ಮಾಣವಾಗಿರುವ ಪ್ರಪ್ರಥಮ ವಿಮಾನ ನಿಲ್ದಾಣವಾಗಿದ್ದು, ಇದಕ್ಕೆ 450 ಕೋಟಿ ರೂ. ವಿನಿಯೋಗಿಸಲಾಗಿದೆ. ಶಿವಮೊಗ್ಗದಿಂದ 15 ಕಿ.ಮೀ. ದೂರದಲ್ಲಿರುವ ಸೋಗಾನೆ ಎಂಬಲ್ಲಿ 779 ಎಕರೆ ಜಾಗದಲ್ಲಿ ಏರ್‍ ‌ಪೋರ್ಟ್ ಮೈದಾಳಿದ್ದು, ಇದರಲ್ಲಿ ಏರ್‍‌ ಬಸ್‌ ಮಾದರಿಯ ವಿಮಾನಗಳೂ ಬಂದಿಳಿಯುವ ಅನುಕೂಲಗಳನ್ನು ಕಲ್ಪಿಸಲಾಗಿದೆ. ಇದರಿಂದ ಶಿವಮೊಗ್ಗ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

ಈ ವೇಳೆ ಮಾತನಾಡಿದ ಸಚಿವ ಎಂ.ಬಿ ಪಾಟೀಲ್, ಮುಂದಿನ ದಿನಗಳಲ್ಲಿ ಶಿವಮೊಗ್ಗದಿಂದ ದೆಹಲಿ, ಮುಂಬೈ, ಹೈದರಾಬಾದ್, ಚೆನ್ನೈ, ಗೋವಾ ಮುಂತಾದ ನಗರಗಳಿಗೆ ನೇರ ವಿಮಾನ ಸಂಪರ್ಕ ಕಲ್ಪಿಸಲು ಪ್ರಯತ್ನಿಸಲಾಗುವುದು. ತಕ್ಷಣಕ್ಕೆ ಬೆಂಗಳೂರಿನಲ್ಲಿ ಈ ಸ್ಥಳಗಳಿಗೆ ಕನೆಕ್ಟಿಂಗ್‌ ವಿಮಾನಗಳು ಲಭ್ಯ ಇರಲಿವೆ. ಜೊತೆಗೆ, ಉಡಾನ್‌ ಯೋಜನೆಯಡಿ ವಿಮಾನಯಾನ ಸೇವೆ ವಿಸ್ತರಿಸಲು ಈಗಾಗಲೇ ಟೆಂಡರ್ ಕರೆಯಲಾಗಿದ್ದು, ಅದು ಅಂತಿಮ ಹಂತದಲ್ಲಿದೆ ಎಂದು ಹೇಳಿದ್ದಾರೆ.