ಬೆಂಗಳೂರು: ಬಿಟ್ ಕಾಯಿನ್ ಬಹುಕೋಟಿ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯ (ಇಡಿ) ಮತ್ತೊಮ್ಮೆ ಸಮನ್ಸ್ ಜಾರಿ ಮಾಡಿದ್ದು, ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಮೊಹಮ್ಮದ್ ನಲಪಾಡ್ ಅವರಿಗೆ ಎರಡನೇ ಬಾರಿ ನೋಟಿಸ್ ನೀಡಿದ್ದು, ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನಿರ್ದೇಶನ ನೀಡಿದ್ದಾರೆ.
ಈ ಮೊದಲು ನೀಡಲಾಗಿದ್ದ ನೋಟಿಸ್ಗೆ ನಲಪಾಡ್ ಹಾಜರಾಗಿರಲಿಲ್ಲ. ರಾಜಕೀಯ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ ಎಂದು ತಿಳಿಸಿ ಇಡಿಗೆ ಮನವಿ ಸಲ್ಲಿಸಿದ್ದರು ಎನ್ನಲಾಗಿದೆ.ಇದೀಗ ಎರಡನೇ ಬಾರಿ ಸಮನ್ಸ್ ಜಾರಿಯಾಗಿರುವ ಹಿನ್ನೆಲೆಯಲ್ಲಿ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಇತ್ತೀಚೆಗೆ ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಅಶೋಕನಗರದಲ್ಲಿರುವ ನಲಪಾಡ್ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಈ ವೇಳೆ ಅಧಿಕಾರಿಗಳು ಸುಮಾರು 21 ಗಂಟೆಗಳ ಕಾಲ ದಾಖಲೆಗಳು ಮತ್ತು ಇತರ ಮಾಹಿತಿಗಳ ಪರಿಶೀಲನೆ ನಡೆಸಿದ್ದರು.
ಪ್ರಕರಣದ ತನಿಖೆಯ ಭಾಗವಾಗಿ ಇಡಿ ಈಗಾಗಲೇ ಶ್ರೀಕಿ, ಸುನೇಶ್ ಹೆಗ್ಡೆ ಹಾಗೂ ರಾಬಿನ್ ಖಂಡೇವಾಲ ಅವರನ್ನು ಬಂಧಿಸಿ ವಿಚಾರಣೆ ನಡೆಸುತ್ತಿದೆ.ಬಿಟ್ ಕಾಯಿನ್ ಹಗರಣಕ್ಕೆ ಸಂಬಂಧಿಸಿದ ಹಣಕಾಸು ವ್ಯವಹಾರಗಳು ಹಾಗೂ ಇತರ ಅಂಶಗಳ ಕುರಿತು ಇಡಿ ಅಧಿಕಾರಿಗಳು ತನಿಖೆ ಮುಂದುವರಿಸಿದ್ದು, ನಲಪಾಡ್ ವಿಚಾರಣೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗುವ ಸಾಧ್ಯತೆ ಇದೆ.
















