ಬೆಂಗಳೂರು: ಗುತ್ತಿಗೆದಾರ ಸಚಿನ್ ಸಾವಿನ ಪ್ರಕರಣದ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಪಡೆದು, ದುರ್ಘಟನೆಯ ಸಿಬಿಐ ತನಿಖೆಗೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ್ಯಾಯಕ್ಕಾಗಿ ಸಿಬಿಐ ತನಿಖೆಗೆ ಸಚಿನ್ ಕುಟುಂಬವೂ ಒತ್ತಾಯಿಸಿದೆ. ಹಿಂದೆ, ಇದೇ ಸರ್ಕಾರದ ಸಚಿವ ನಾಗೇಂದ್ರ ಅವರೂ ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ರಾಜೀನಾಮೆ ಕೊಟ್ಟಿದ್ದಾರೆ. ಒಂದು ಕ್ಷಣವೂ ತಡ ಮಾಡದೇ, ಪ್ರಿಯಾಂಕ್ ಖರ್ಗೆಯವರ ರಾಜೀನಾಮೆ ಪಡೆದುಕೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆಗ್ರಹಿಸಿದರು. ಯಾರನ್ನೋ ಉಳಿಸುವ, ರಕ್ಷಿಸುವ ದುಸ್ಸಾಹಸ ಬೇಡ ಎಂದು ಎಚ್ಚರಿಸಿದರು.
ಮೇಧಾವಿ ಪ್ರಿಯಾಂಕ್ ಖರ್ಗೆಯವರಿಗೆ ಮರೆವು ಜಾಸ್ತಿ. ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಈಶ್ವರಪ್ಪ ಅವರ ಮೇಲೆ ಆರೋಪ ಬಂದಾಗ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಟ್ಟದ್ದನ್ನು ಪ್ರಿಯಾಂಕ್ ಮರೆಯಬಾರದು. ಮಡಿಕೇರಿಯಲ್ಲಿ ಪೊಲೀಸ್ ಅಧಿಕಾರಿ ಗಣಪತಿ ಆತ್ಮಹತ್ಯೆ ಮಾಡಿಕೊಂಡಿದ್ದು, ಇದೇ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಆ ಪ್ರಕರಣದಲ್ಲಿ ಅಂದಿನ ಗೃಹ ಸಚಿವ ಜಾರ್ಜ್ ಅವರು ಕೂಡ ರಾಜೀನಾಮೆ ಕೊಟ್ಟು, ಸಿಬಿಐ ತನಿಖೆ ಆಗಿ ಕ್ಲೀನ್ ಚಿಟ್ ಬಂದಿತ್ತು ಎಂದು ಹೇಳಿದರು.
ಸಚಿನ್ ಅವರ ಕುಟುಂಬಕ್ಕೆ ತಕ್ಷಣದಿಂದ ಭದ್ರತೆ ಕೊಡಬೇಕು. ಕುಟುಂಬಕ್ಕೆ 1 ಕೋಟಿ ರೂ.ಗಳ ಪರಿಹಾರ ನೀಡಬೇಕು. ಹಲವರು ವಿದ್ಯಾವಂತರಿದ್ದು, ಕುಟುಂಬದ ಒಬ್ಬರು ಸದಸ್ಯರಿಗೆ ಸರಕಾರಿ ನೌಕರಿ ಕೊಡಬೇಕು ಎಂದು ಒತ್ತಾಯಿಸಿದರು.
ಹಿಂದೂ ಸಮಾಜದ ಸಿದ್ಧಲಿಂಗ ಸ್ವಾಮೀಜಿ, ಶಾಸಕ ಬಸವರಾಜ ಮತ್ತಿಮೂಡ, ಕಲಬುರ್ಗಿಯ ಬಿಜೆಪಿ ನಾಯಕರಾದ ಚಂದುಪಾಟೀಲ, ಮಣಿಕಂಠ ರಾಠೋಡ್ ಅವರ ಕೊಲೆಗೆ ಸಂಚು ರೂಪಿಸಿದ್ದಾಗಿ ಡೆತ್ ನೋಟ್ ತಿಳಿಸಿದೆ. ಸಿದ್ಧಲಿಂಗ ಸ್ವಾಮೀಜಿ ಅವರ ಧ್ವನಿ ಅಡಗಿಸಲು ಮಹಾರಾಷ್ಟ್ರದ ಸುಪಾರಿ ಕಿಲ್ಲರ್ಗಳನ್ನು ಬಳಸುವ ವಿಚಾರವೂ ಡೆತ್ ನೋಟಿನಲ್ಲಿದೆ. ಹಾಗಾಗಿ ಇದೊಂದು ಗಂಭೀರ ವಿಚಾರ. ಆದ್ದರಿಂದ ಇದರ ಸಿಬಿಐ ತನಿಖೆ ಅತ್ಯಗತ್ಯ ಎಂದರು.