ಬೆಂಗಳೂರು: ಗ್ಯಾರಂಟಿ ಯೋಜನೆ ಜಾರಿಗೆ ಆಗ್ರಹಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಿಡಿದೆದ್ದಿದ್ದು, ಇಂದು ವಿಧಾನಮಂಡಲ ಅಧಿವೇಶನದ ಒಳಗೆ ಮತ್ತು ಹೊರಗೂ ಪ್ರತಿಭಟನೆ ನಡೆಸಿದೆ.
ಸದನದೊಳಗೆ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಪ್ರತಿಭಟನೆ ನಡೆದರೇ ಇತ್ತ ನಗರದ ಫ್ರೀಡಂ ಪಾರ್ಕ್ನಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟಿಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್, ಮಾಜಿ ಸಿಎಂ ಡಿವಿ ಸದಾನಂದಗೌಡ, ಮಾಜಿ ಸಚಿವರಾದ ಗೋಪಾಲಯ್ಯ, ಬಿ.ಸಿ.ನಾಗೇಶ್, ಎನ್.ಮಹೇಶ್, ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಮಶೇಖರ್ ರೆಡ್ಡಿ, ಪರಿಷತ್ ಸದಸ್ಯ ಎನ್.ರವಿಕುಮಾರ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪ್ರತಿಭಟನೆ ವೇಳೆ ಸರ್ಕಾರದ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕಿ ಗ್ಯಾರಂಟಿ ಯೋಜನೆ ಜಾರಿ ಮಾಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.