ಮಂಗಳೂರು: ಮುಂದಿನ ದಿನಗಳಲ್ಲೂ ಲಿಂಗಾಯಿತ ಮುಖ್ಯಮಂತ್ರಿ ಮಾಡುವ ಏಕೈಕ ಪಕ್ಷ ಬಿಜೆಪಿ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
ಮಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯಾಗಿ ಶಾಸಕ ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಸುವ ವೇಳೆ ಜತೆಗಿದ್ದ ನಳಿನ್‌ಕುಮಾರ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯಿತರಿಗೆ ಅತಿ ಹೆಚ್ಚು ಆದ್ಯತೆ ನೀಡಿದ್ದು ಬಿಜೆಪಿ. ಮೂವರಿಗೆ ಮುಖ್ಯಮಂತ್ರಿ ಸ್ಥಾನ ಕೊಟ್ಟಿದೆ ಎಂದರು.
ಜಗದೀಶ್ ಶೆಟ್ಟರ್ ಹಿರಿಯ ನಾಯಕರು. ಅವರನ್ನು ಪಕ್ಷ ಇಷ್ಟು ಎತ್ತರಕ್ಕೆ ಬೆಳೆಸಿದೆ. ಅವರಿಗೆ ಎಲ್ಲ ಹುದ್ದೆಗಳನ್ನು ನೀಡಿದೆ. ಅವರು ರಾಜ್ಯ ಮಟ್ಟದ ನಾಯಕರಾಗಿ ಬೆಳೆಯುವಲ್ಲಿ ಬಿಜೆಪಿ ಕೊಡುಗೆ ದೊಡ್ಡದಿದೆ. ಶಾಸಕರಾಗಿ, ಸಚಿವರಾಗಿ ಮುಖ್ಯಮಂತ್ರಿಯಾಗಿ ಜವಾಬ್ದಾರಿ ನಿರ್ವಹಣೆ ಮಾಡಿದವರು. ಅವರನ್ನು ಪಕ್ಷದಲ್ಲಿ ಉಳಿಸಿಕೊಳ್ಳಲು ಕೇಂದ್ರದ ನಾಯಕರೇ ಅವರ ಮನೆಯಲ್ಲಿ ಬಂದು ಕುಳಿತು ಮಾತುಕತೆ ಮಾಡಿ, ಅವರ ಎಲ್ಲ ಬೇಡಿಕೆ ಈಡೇರಿಸುವುದಾಗಿ ಹೇಳಿದ್ದರು. ಆದರೂ ಅವರು ಪಕ್ಷವನ್ನು ತೊರೆದಿದ್ದಾರೆ. ಕಾಂಗ್ರೆಸ್‌ನಲ್ಲಿ ಪರಿಸ್ಥಿತಿ ಏನು ಅಂತ ಅವರಿಗೂ ಅನುಭವವಾಗುತ್ತದೆ’ ಎಂದರು.
ಮಂಗಳೂರು ದಕ್ಷಿಣ ಕ್ಷೇತ್ರದಿಂದ ವೇದವ್ಯಾಸ ಕಾಮತ್ ನಾಮಪತ್ರ ಸಲ್ಲಿಸಿದ್ದು, ಅಧಿಕ ಮತಗಳಿಂದ ಆಯ್ಕೆಯಾಗಲಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಪರ ಅಲೆ ಇದೆ. ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರ ಮಾಡುತ್ತೇವೆ ಎಂದು ಹೇಳಿದರು.
ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ಅವರು ನಗರದ ಕದ್ರಿ ಮಂಜುನಾಥ, ಕ್ಷೇತ್ರ ದೇವತೆ ಮಂಗಳಾದೇವಿ, ರಥಬೀದಿಯ, ವೆಂಕಟರಮಣ ದೇವರಿಗೆ ಪೂಜೆ ಸಲ್ಲಿಸಿ, ನಂತರ ಕದ್ರೋಳಿ ಗೋಕರ್ಣನಾಥ ದೇವಾಲಯದಿಂದ ಮೆರವಣಿಗೆಯಲ್ಲಿ ಸಾಗಿ ನಾಮಪತ್ರ ಸಲ್ಲಿಸಿದರು.
ಮೆರವಣಿಗೆ ಹೊರಡುವ ಪೂರ್ವದಲ್ಲಿ, ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 100ಕ್ಕೂ ಹೆಚ್ಚು ದೇವಾಲಯಗಳಲ್ಲಿ ಪಕ್ಷದ ಪದಾಧಿಕಾರಿಗಳು ಪೂಜೆ ಸಲ್ಲಿಸಿ ತಂದಿದ್ದ ಪ್ರಸಾದವನ್ನು ಸ್ವೀಕರಿಸಿದರು.