ಬೆಂಗಳೂರು: ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಹೇರಲು ಬಿಜೆಪಿ ಗೋಪ್ಯವಾಗಿ ಯೋಜನೆ ರೂಪಿಸುತ್ತಿದೆ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.
ನೇಹಾ ಹತ್ಯೆಯನ್ನು ಶಿವಕುಮಾರ್ ಸಹ ಖಂಡಿಸಿದ್ದು, ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಯಾರೇ ಕಾನೂನನ್ನು ಕೈಗೆ ತೆಗೆದುಕೊಂಡರೂ ನಾವು ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಇದಕ್ಕೆ ಸರ್ಕಾರ ಬದ್ಧವಾಗಿದೆ. ಯಾರೊಬ್ಬರೂ (ಸರ್ಕಾರದಿಂದ) ಪೊಲೀಸರ ಕೆಲಸಕ್ಕೆ ಅಡ್ಡಿಪಡಿಸುವುದಿಲ್ಲ ಎಂದು ಶಿವಕುಮಾರ್ ಹೇಳಿದ್ದಾರೆ.
ಬಿಜೆಪಿ ನಮಗೆ ಬೆದರಿಕೆ ಹಾಕಲು ಪ್ರಯತ್ನಿಸುತ್ತಿದೆ. ಕರ್ನಾಟಕವು ಅತ್ಯುತ್ತಮ ಕಾನೂನು ಮತ್ತು ಸುವ್ಯವಸ್ಥೆಯನ್ನು ಹೊಂದಿದೆ. ಬಿಜೆಪಿಯವರು ರಾಷ್ಟ್ರಪತಿ ಆಡಳಿತವನ್ನು ಹೇರಲಿದ್ದೇವೆ ಎಂದು ಪರೋಕ್ಷವಾಗಿ ಮತದಾರರಿಗೆ ಹೇಳುತ್ತಿದ್ದಾರೆ. ಪ್ರತಿಪಕ್ಷದ ನಾಯಕ ಆರ್ ಅಶೋಕ ಗೋಪ್ಯವಾಗಿ ಅದನ್ನೇ ಮಾಡಲು ಪ್ರಯತ್ನಿಸುತ್ತಿದ್ದಾರೆ. ಅದಕ್ಕಾಗಿಯೇ ನಾಟಕ ಮಾಡುತ್ತಿದ್ದಾರೆ. ಆದರೆ ಅವರು ಅದನ್ನು ಮಾಡಲು ಸಾಧ್ಯವಿಲ್ಲ. ಇದು ಅಸಾಧ್ಯ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
‘ವೈಯಕ್ತಿಕ ಕಾರಣದಿಂದ ನೇಹಾ ಹತ್ಯೆ ನಡೆದಿದೆ’ ಎಂಬ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.
ಸಿದ್ದರಾಮಯ್ಯ ಹಳೆಯ ಕಥೆಯನ್ನೇ ಹಲವಾರು ಬಾರಿ ಪುನರಾವರ್ತಿಸಿದ್ದಾರೆ. ಕಾಂಗ್ರೆಸ್ ಯಾರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದೆ? ಸೂಕ್ತ ತನಿಖೆ ನಡೆಸದೆ ಸಿಎಂ ಅವರೇ ಇಂತಹ ಹೇಳಿಕೆ ನೀಡಿದರೆ ಮುಕ್ತ ಮತ್ತು ನ್ಯಾಯಸಮ್ಮತ ತನಿಖೆಯನ್ನು ನಿರೀಕ್ಷಿಸಬಹುದೇ ಎಂದು ವಿಜಯೇಂದ್ರ ಪ್ರಶ್ನಿಸಿದರು.