ವಿರುಧುನಗರ (ತಮಿಳುನಾಡು): ಪಟಾಕಿ ಕಾರ್ಖಾನೆಯಲ್ಲಿ ಪಟಾಕಿ ಸ್ಫೋಟಗೊಂಡು ಐವರು ಮಹಿಳೆಯರು ಸೇರಿದಂತೆ ಎಂಟು ಜನರು ಮೃತಪಟ್ಟ ಘಟನೆ ವಿರುಧುನಗರ ಜಿಲ್ಲೆಯ ವೆಂಬಕೊಟ್ಟೈ ಬಳಿಯ ರಾಮು ದೇವನಪಟ್ಟಿಯಲ್ಲಿರುವ ಖಾಸಗಿ ಪಟಾಕಿ ಕಾರ್ಖಾನೆಯಲ್ಲಿ ಶನಿವಾರ ಸಂಭವಿಸಿದೆ.
ಘಟನೆಯಲ್ಲಿ ಆರು ಜನ ಗಾಯಗೊಂಡಿದ್ದು, ಅವರನ್ನು ಶಿವಕಾಶಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲು ಮಾಡಲಾಗಿದೆ.
ಅಪಘಾತದ ಸ್ಥಳದಲ್ಲಿ ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ತೀವ್ರ ಕಾರ್ಯಾಚರಣೆಯಲ್ಲಿ ತೊಡಗಿದೆ.
ಎಂದಿನಂತೆ ಇಂದು ಸಹ ಕಾರ್ಖಾನೆಗೆ ಆಗಮಿಸಿದ್ದ ಕಾರ್ಮಿಕರು ತಮ್ಮ ತಮ್ಮ ಕೆಲಸದಲ್ಲಿ ತೊಡಗಿದ್ದರು. ಆದರೆ, ಇದ್ದಕ್ಕಿದ್ದಂತೆ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಮನೆ ಸಹ ಕುಸಿದಿದೆ. ಘಟನೆ ಬಳಿಕ ಸ್ಥಳದಿಂದ ಹಲವರು ಓಡಿ ಹೋಗುತ್ತಿರುವುದು ಕಂಡು ಬಂದಿದೆ.
ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರು ಹಾಗೂ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.